ಹೊಸದಿಗಂತ ಡಿಜಿಟಲ್ ಡೆಸ್ಕ್:
ಇನ್ನೂ ಚಳಿಗಾಲ ಮುಗಿದಿಲ್ಲ. ಬೇಸಿಗೆ ಶುರುವಾಗಿಲ್ಲ. ಆಗಲೇ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಇತ್ತ ಸಿಲಿಕಾನ್ ಸಿಟಿ ಜನರಿಗೆ ಯಲ್ಲಿ ಬೇಸಿಗೆ ಆರಂಭಕ್ಕೂ ಮೊದಲೇ ಶಾಕ್ ಎದುರಾಗಿದೆ.
ಕಳೆದ ಬಾರಿ ಬೇಸಿಗೆಯಲ್ಲಿ ಹೊರಡಿಸಿದ್ದ ಆದೇಶ ಮರು ಜಾರಿ ಮಾಡಲಾಗಿದ್ದು, ಅನಗತ್ಯವಾಗಿ ನೀರು ವ್ಯರ್ಥ ಮಾಡಿದವರಿಗೆ ದಂಡ ವಿಧಿಸಲು ಜಲಮಂಡಳಿ ಸಜ್ಜಾಗಿದೆ. ಈ ಬಗ್ಗೆ ಆದೇಶ ಹೊರಡಿಸಿರುವ ಜಲಮಂಡಳಿ ಕೈದೋಟ, ವಾಹನ ತೊಳೆಯಲು ಕುಡಿಯುವ ನೀರು ಬಳಸಿದರೆ 5 ಸಾವಿರ ರೂ. ದಂಡ ವಿಧಿಸುವುದಾಗಿ ತಿಳಿಸಿದೆ. ಆದೇಶ ಉಲ್ಲಂಘಿಸಿದವರ ಬಗ್ಗೆ ಸಹಾಯವಾಣಿ ಸಂಖ್ಯೆ 1916 ಕರೆ ಮಾಡಿ ದೂರು ನೀಡಲು ಸೂಚನೆ ನೀಡಲಾಗಿದೆ.
ಬೆಂಗಳೂರು ಮಹಾನಗರದಲ್ಲಿ ಖಾಯಂ ವಾಸಿಗಳು ಹಾಗೂ ಬಂದು ಹೋಗುವವರನ್ನು ಸೇರಿಸಿದಂತೆ ಸುಮಾರು 1 ಕೋಟಿ 40 ಲಕ್ಷ ಜನಸಂಖ್ಯೆಯನ್ನು ಗುರುತಿಸಲಾಗಿದೆ. ಎಲ್ಲರಿಗೂ ಕುಡಿಯುವ ನೀರನ್ನು ಪೂರೈಕೆ ಮಾಡುವುದು ಅವಶ್ಯಕವಾಗಿದೆ. ಪ್ರಸ್ತುತ ನಗರದಲ್ಲಿ ಪ್ರತಿದಿನ ಉಷ್ಣಾಂಶ ಏರುತ್ತಿದೆ. ಇತ್ತೀಚಿನ ದಿನಗಳಲ್ಲಿ ಮಳೆಯ ಕೊರತೆಯಿಂದ ಅಂತರ್ಜಲ ಕುಸಿದಿದ್ದು, ಬೆಂಗಳೂರು ನಗರದಲ್ಲಿ ನೀರನ್ನು ಪೋಲು ಮಾಡುವುದನ್ನು ತಡೆಗಟ್ಟುವುದು ಅವಶ್ಯವೆಂದು ಮನಗಂಡು ಕುಡಿಯುವ ನೀರನ್ನು ಸಾರ್ವಜನಿಕರು ಮಿತವಾಗಿ ಬಳಸುವಂತೆ ಅಗತ್ಯಪಡಿಸಲಾಗಿದೆ. ಈ ಹಿನ್ನಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಈ ಕೆಳಕಂಡಂತೆ ಆದೇಶ ಹೊರಡಿಸಲಾಗಿದೆ.
ವಾಹನಗಳ ಸ್ವಚ್ಚತೆಗೆ, ಕೈದೋಟಕ್ಕೆ, ಕಟ್ಟಡ ನಿರ್ಮಾಣಕ್ಕೆ, ಮನೋರಂಜಕವಾಗಿ ಕಾರಂಜಿಯಂತಹ ಆಕರ್ಷಕ ವ್ಯವಸ್ಥೆಗೆ, ಸಿನಿಮಾ ಮಂದಿರ ಮತ್ತು ಮಾಲುಗಳಲ್ಲಿನ ಕುಡಿಯುವ ನೀರಿನ ಹೊರತು ಇನ್ನಿತರೆ ಬಳಕೆಗೆ, ರಸ್ತೆ ನಿರ್ಮಾಣ ಮತ್ತು ಸ್ವಚ್ಛತೆಗೆ ಬಳಸುವಂತಿಲ್ಲ.