ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾ ಕುಂಭಮೇಳಕ್ಕೆ ತೆರಳಿದ್ದ ಬೀದರ್ ಮೂಲದ ಆರು ಮಂದಿ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉತ್ತರಪ್ರದೇಶದ ಕಾಶಿ ಬಳಿ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಆರು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಬೀದರ್ ನಗರದ ಲಾಡಗೇರಿ ಬಡಾವಣೆಯ ನಿವಾಸಿಗಳು ಎಂದು ತಿಳಿದುಬಂದಿದೆ.
ಬೀದರ್ ನಗರದ ಲಾಡಗೇರಿ ಬಡಾವಣೆಯ ನಿವಾಸಿಗಳಾದ ಸುನೀತಾ(35) ಸಂತೋಷ್ (43) ನೀಲಮ್ಮ (60) ಸೇರಿದಂತೆ ಆರು ಜನ ಸಾವನ್ನಪ್ಪಿದ್ದಾರೆ. ಉಳಿದವರ ಗುರುತು ಇನ್ನೂ ಪತ್ತೆಯಾಗಿಲ್ಲ.
ಒಂದೇ ಗಾಡಿಯಲ್ಲಿ ಒಟ್ಟು 12 ಜನ ಕುಂಭ ಮೇಳಕ್ಕೆ ತೆರಳಿದ್ದರು. ಪುಣ್ಯ ಸ್ನಾನ ಮಾಡಿದ ಬಳಿಕ ಪ್ರಯಾಗ್‌ರಾಜ್‌ನಿಂದ ಕಾಶಿ ಕಡೆಗೆ ಕ್ರೂಸರ್‌ನಲ್ಲಿ ತೆರಳುತ್ತಿದ್ದರು. ಇಂದು ಬೆಳಗ್ಗೆ ಕಾಶಿಯಿಂದ 20 ಕಿಲೋ ಮೀಟರ್ ದೂರದಲ್ಲಿ ಲಾರಿಗೆ ಹಿಂದಿನಿಂದ ಕ್ರೂಸರ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಉಳಿದವರ ಸ್ಥಿತಿ ಗಂಭೀರವಾಗಿದೆ. ಗಾಯಗೊಂಡವರನ್ನು ಸ್ಥಳಿಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತದೇಹಗಳನ್ನು ಸ್ಥಳೀಯ ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.