ಮತ್ತೆ ರಾಜ್ಯ ಸರ್ಕಾರಕ್ಕೆ ಹಿನ್ನಡೆ: ಮೂರು ಮಸೂದೆಗಳಿಗೆ ಸಹಿ ಹಾಕದೆ ವಾಪಸ್ ಕಳುಹಿಸಿದ ರಾಜ್ಯಪಾಲರು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಸಂಘರ್ಷ ಮುಂದುವರಿದಿದ್ದು, ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್​ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆ-2024 ಸೇರಿದಂತೆ ಒಟ್ಟು ಮೂರು ಮಸೂದೆಗಳಿಗೆ ಸಹಿ ಹಾಕದೆ ರಾಜ್ಯಪಾಲ ಥಾವರ್ ಚಂದ್​ ಗೆಹ್ಲೋಟ್​ ಅವರು ಸರ್ಕಾರಕ್ಕೆ ವಾಪಸ್ ಕಳುಸಿದ್ದಾರೆ.

ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್​ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆಯನ್ನು ಬೆಳಗಾವಿಯಲ್ಲಿ ನಡೆದಿದ್ದ ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲಾಗಿತ್ತು. ಈ ಮಸೂದೆ ಪ್ರಕಾರ ವಿಶ್ವವಿದ್ಯಾಲಯಗಳಿಗೆ ರಾಜ್ಯಾಪಾಲರ ಬದಲು ಮುಖ್ಯಮಂತ್ರಿಗಳು ಕುಲಾಧಿಪತಿಗಳಾಗಲಿದ್ದಾರೆ. ವಿಶ್ವವಿದ್ಯಾಲಯದ ಎಲ್ಲ ನೇಮಕಾತಿ, ಆಡಳಿತಾತ್ಮಕ ಅಧಿಕಾರ ಮುಖ್ಯಮಂತ್ರಿಗಳಿಗೆ ಸೇರಲಿದೆ. ಈ ಮೂಲಕ ರಾಜ್ಯಪಾಲರ ಅಧಿಕಾರವನ್ನು ಮೊಟಕುಗೊಳಿಸಲಾಗಿದೆ.

ಮೈಸೂರು ಪ್ರಾಧಿಕಾರ ಅಭಿವೃದ್ಧಿ ಮಸೂದೆ- 2024 ಮತ್ತು ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ರಕ್ಷಣೆ (ತಿದ್ದುಪಡಿ) ಮಸೂದೆ-2024ಕ್ಕೆ ಸಹಿ ಹಾಕದೆ ರಾಜ್ಯಪಾಲರು ವಾಪಸ್​ ಕಳುಹಿಸಿದ್ದಾರೆ. ಈ ತಿದ್ದುಪಡಿಯು ಬದಲಾವಣೆ ತರುವ ಉದ್ದೇಶಕ್ಕಿಂತಲೂ ಅಧಿಕಾರ ಕಿತ್ತುಕೊಳ್ಳುವ ಯತ್ನವಾಗಿದೆ ಎಂದು ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ರಾಜ್ಯಸರ್ಕಾರ ಮಂಡಿಸಿದ ಮಸೂದೆಗಳನ್ನು ಸಹಿ ಹಾಕದೆ ರಾಜ್ಯಪಾಲರು ವಾಪಸ್ ಕಳುಹಿಸುತ್ತಿರುವುದು ಇದು ಮೊದಲೇನಲ್ಲ. ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿಯನ್ನು ತಡೆಗಟ್ಟುವ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಗೆ ಅಂಕಿತ ಹಾಕದೆ ಹಲವು ಸ್ಪಷ್ಟನೆ ಕೇಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಾಪಸ್ ಕಳುಹಿಸಿದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!