ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ನೆತ್ತರಕೆರೆ ಎಂಬಲ್ಲಿ ನಿರ್ಮಾಣ ಹಂತದಲ್ಲಿರುವ ಕಾಲೇಜ್ ನ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಶ್ಚಿಮ ಬಂಗಾಳ ಮೂಲದ ಇಬ್ಬರು ಕಾರ್ಮಿಕರು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು, ಒರ್ವ ಮೃತಪಟ್ಟರೆ,ಇನ್ನೋರ್ವ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ.
ಬಂಗಾಳ ರಾಜ್ಯದ ಬೀರ್ ಬೂಮ್ ಜಿಲ್ಲೆಯ ನಿವಾಸಿ ಅಮೀರ್ ಖಾನ್ ಮೃತಪಟ್ಟ ದುರ್ದೈವಿಯಾಗಿದ್ದು, ಅದೇ ಜಿಲ್ಲೆಯ ಕುಖುರ ನಿವಾಸಿ ಮುಖ್ತಾಧರ್ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಬೀರುಲ್ ಎಂಬವರು ಪಶ್ಚಿಮ ಬಂಗಾಲದಿಂದ ಈ ಕೂಲಿ ಕಾರ್ಮಿಕರನ್ನು ಕರೆತಂದಿದ್ದು, ನೆತ್ತರಕೆರೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಕಾಲೇಜ್ ಕಟ್ಟಡದ ಕಾಮಗಾರಿಯಲ್ಲಿ ಕಳೆದ 6 ತಿಂಗಳಿನಿಂದ ಇವರು ಕಾರ್ಯನಿರ್ವಹಿಸುತ್ತಿದ್ದರೆನ್ನಲಾಗಿದೆ. ಮಂಗಳವಾರ ಮಧ್ಯಾಹ್ನ ಕಟ್ಟಡದ ಎರಡನೇ ಮಹಡಿಯಲ್ಲಿ ಕೆಲಸದಲ್ಲಿ ನಿರತರಾಗಿದ್ದ ಅಮೀರ್ ಖಾನ್ ಆಕಸ್ಮಿಕವಾಗಿ ಕಾಲು ಜಾರಿ ಒಂದನೇ ಮಹಡಿಯಲ್ಲಿ ಕೆಲಸದಲ್ಲಿ ನಿರತರಾಗಿದ್ದ ಮುಖ್ತಾಧರ್ ಮೇಲ ಬಿದ್ದಿದ್ದನೆನ್ನಲಾಗಿದೆ.
ತಕ್ಷಣ ಇತರೆ ಕಾರ್ಮಿಕರು ಇವರಿಬ್ಬರನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದ್ದು,ದಾರಿ ಮಧ್ಯೆ ಸಾವನ್ನಪ್ಪಿದ್ದಾನೆ.
ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.



