ಹೊಸದಿಗಂತ ಡಿಜಿಟಲ್ ಡೆಸ್ಕ್
ಅತಿ ವೇಗ ಹಾಗೂ ಸಂಚಾರ ನಿಯಮ ಉಲ್ಲಂಘನೆಯಿಂದಾಗಿ ನಗರದ ಬನ್ನೇರುಘಟ್ಟ ರಸ್ತೆಯ ಅರಕೆರೆ ಬಳಿ ಬೆಳಿಗ್ಗೆ ಶಾಲಾ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ.
ಟ್ರಾಫಿಕ್ ಸಿಗ್ನಲ್‌ನಿಂದ ತಪ್ಪಿಸಿಕೊಳ್ಳುವ ಆತುರದಲ್ಲಿದ್ದ ಕಾರು ಚಾಲಕ, ಅತಿ ವೇಗವಾಗಿ ವಾಹನ ಚಲಾಯಿಸಿದ್ದೇ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ. ವೇಗವಾಗಿ ಬಂದ ಕಾರು ರಸ್ತೆಯಲ್ಲಿ ಚಲಿಸುತ್ತಿದ್ದ ಶಾಲಾ ಬಸ್‌ನ ಮಧ್ಯಭಾಗಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದ್ದು, ಬಸ್‌ಗೂ ಗಣನೀಯ ಹಾನಿಯಾಗಿದೆ.
ಅಪಘಾತದ ಸಮಯದಲ್ಲಿ ಬಸ್‌ನಲ್ಲಿ ಶಾಲಾ ಮಕ್ಕಳಿದ್ದರೂ, ಯಾರಿಗೂ ಗಾಯಗಳಾಗಿಲ್ಲ ಎಂಬುದು ಸಮಾಧಾನಕರ ವಿಷಯ. ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವಿಷಯ ತಿಳಿಯುತ್ತಿದ್ದಂತೆಯೇ ಹುಳಿಮಾವು ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಾಹನಗಳನ್ನು ರಸ್ತೆಯಿಂದ ತೆರವುಗೊಳಿಸಿ ಸಂಚಾರ ದಟ್ಟಣೆಯನ್ನು ಸುಗಮಗೊಳಿಸಲಾಗಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ.



