ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆಎಸ್ ಆರ್ ಟಿಸಿ ಕಂಡಕ್ಟರ್ ಮೇಲೆ ಮರಾಠಿಗರ ಹಲ್ಲೆ ಖಂಡಿಸಿ ಕನ್ನಡ ಪರ ಸಂಘಟನೆಗಳು ಇಂದು ಕರೆ ನೀಡಿರುವ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಂಗಳೂರಿನ ಟೌನ್ ಹಾಲ್ ಬಳಿ ಪ್ರತಿಭಟನಾ ಮೆರವಣಿಗೆಗೆ ಮುಂದಾದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್, ಸಾ.ರಾ ಗೋವಿಂದು ಸೇರಿದಂತೆ ಅನೇಕ ಕನ್ನಡಪರ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದು ಬಸ್ ನಲ್ಲಿ ಕರೆದೊಯ್ದರು.
ಬಳಿಕ ಫ್ರೀಡಂ ಪಾರ್ಕ್ ನಲ್ಲಿ ದೊಡ್ಡ ಹೈಡ್ರಾಮವೇ ನಡೆಯಿತು. ಬಸ್ ನಿಂದ ಕೆಳಗೆ ಇಳಿಯುವುದಿಲ್ಲ ಎಂದು ಪಟ್ಟು ಹಿಡಿದ ವಾಟಾಳ್ ನಾಗರಾಜ್, ರಾಜ್ಯಾದ್ಯಂತ ಬಂದ್ ಯಶಸ್ವಿಯಾಗಿದೆ. ಆದರೆ ರಾಜ್ಯ ಸರ್ಕಾರ ಪೊಲೀಸರ ಮೂಲಕ ಬಂದ್ ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದರು. ಪೊಲೀಸ್ ರಾಜ್ಯ, ಪೊಲೀಸ್ ಗೂಂಡಾಗಿರಿ ಎಂದು ಆಕ್ರೋಶ ವ್ಯಕ್ತಪಡಿದರು.
ಟೌನ್ ಹಾಲ್ ಬಳಿ ಮಾತ್ರ ಪ್ರತಿಭಟನೆ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಬಸ್ ನಿಂದ ಇಳಿಯುವುದಿಲ್ಲ. ರಾಜ್ಯ ನೆಲ, ಜಲ, ಭಾಷೆ ಪರ ನಮ್ಮ ಹೋರಾಟ ನಿರಂತರವಾದದ್ದು ಎಂದು ಹೇಳಿದರು.