ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆಯಲ್ಲಿ ಇಂದು ವಕ್ಫ್ ಕಾಯ್ದೆ ತಿದ್ದುಪಡಿ ಮಸೂದೆ ಮಂಡನೆಯಾಗಿದೆ. ಪ್ರತಿಪಕ್ಷಗಳ ತೀವ್ರ ಗದ್ದಲದ ನಡುವೆಯೂ ಲೋಕಸಭೆಯಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, ವಕ್ಫ್ ಕಾಯ್ದೆ ತಿದ್ದುಪಡಿ ಮಸೂದೆ ಮಂಡನೆ ಮಾಡಿದರು.
ಇತ್ತ ಅಖಿಲ್ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (AIMPLB), ವಕ್ಫ್ ಕಾಯ್ದೆ ತಿದ್ದುಪಡಿ ಮಸೂದೆಯನ್ನು ವಿರೋಧಿಸಿದ್ದು, ಒಂದು ವೇಳೆ ಮಸೂದೆಯು ಸಂಸತ್ತಿನಲ್ಲಿ ಅಂಗೀಕಾರಗೊಂಡರೆ ರಾಷ್ಟ್ರವ್ಯಾಪಿ ಚಳುವಳಿ ನಡೆಸುವುದಾಗಿ ಘೋಷಿಸಿದೆ.
ದೆಹಲಿಯಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ AIMPLB ವಕ್ತಾರ ಡಾ. ಸೈಯದ್ ಖಾಸಿಂ ರಸೂಲ್ ಇಲಿಯಾಸ್, ಒಂದು ವೇಳೆ ವಕ್ಫ್ ಕಾಯ್ದೆ ತಿದ್ದುಪಡಿ ಮಸೂದೆಯು ಸಂಸತ್ತಿನಲ್ಲಿ ಅಂಗೀಕಾರಗೊಂಡರೆ, ನಾವು ರಾಷ್ಟ್ರವ್ಯಾಪಿ ಚಳುವಳಿಯನ್ನು ಪ್ರಾರಂಭಿಸುತ್ತೇವೆ ಎಂದುಹೇಳಿದ್ದಾರೆ.
ಮಸೂದೆಯನ್ನು ಪ್ರಸ್ತುತ ರೂಪದಲ್ಲಿ ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ. ಇದು ಮುಸ್ಲಿಮರ ಸಂವಿಧಾನಬದ್ಧ ಹಕ್ಕುಗಳನ್ನು ಕಿತ್ತುಕೊಳ್ಳಲಿದೆ. ಹೀಗಾಗಿ ಈ ಮಸೂದೆ ಕಾಯ್ದೆಯಾಗಿ ಜಾರಿಯಾದರೆ ದೇಶವ್ಯಾಪಿ ಪ್ರತಿಭಟನೆಗಳನ್ನು ಹಮ್ಮಿಕೊಳ್ಳುತ್ತೇವೆ ಎಂದು ತಿಳಿಸಿದರು.
ಮಸೂದೆ ಸಂಸತ್ತಿನ ಅಂಗೀಕಾರವಾದರೆ ಅದೇ ಅಂತಿಮವಲ್ಲ. ನಾವು ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಬಹುದಾಗಿದೆ. ನಮಗೆ ಲಭ್ಯವಿರುವ ಎಲ್ಲಾ ಕಾನೂನು ಮತ್ತು ಸಾಂವಿಧಾನಿಕ ನಿಬಂಧನೆಗಳನ್ನು ನಾವು ಬಳಸಿಕೊಳ್ಳುತ್ತೇವೆ.ನಾವು ಶಾಂತಿಯುತ ಆಂದೋಲನವನ್ನು ನಡೆಸುತ್ತೇವೆ ಎಂದು ಡಾ. ಇಲಿಯಾಸ್ ಹೇಳಿದರು.