ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಲೆ ಏರಿಕೆ ಖಂಡಿಸಿ ಮುಖ್ಯಮಂತ್ರಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಫ್ರೀಡಂ ಪಾರ್ಕ್ನಲ್ಲಿ ನಿನ್ನೆಯಿಂದ ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಮುಖಂಡರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಇಂದು ಸಿಎಂ ಮನೆ ಮುತ್ತಿಗೆ ಹಾಕಲು ನಿರ್ಧರಿಸಿ ಫ್ರೀಡಂ ಪಾರ್ಕ್ ಬಳಿ ರಸ್ತೆ ತಡೆ ನಡೆಸುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ನಿರ್ಧರಿಸಿದ್ದರು.
ಹೀಗಾಗಿ, ನೂರಾರು ಕಾರ್ಯಕರ್ತರೊಂದಿಗೆ ರಸ್ತೆಗಿಳಿದು ಸಿಎಂ ಮನೆ ಕಡೆ ತೆರಳಲು ಮುಂದಾದರು. ಅಷ್ಟರಲ್ಲೇ ಬ್ಯಾರಿಕೇಡ್ ಹಾಕಿದ ಪೊಲೀಸರು, ಬಿಜೆಪಿ ಕಾರ್ಯಕರ್ತರನ್ನು ತಡೆದರು. ಬ್ಯಾರಿಕೇಡ್ ಮೇಲೆಯೇ ಹತ್ತಿದ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದರು.
ಪ್ರತಿಪಕ್ಷದ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಶಾಸಕರಾದ ಸಿ.ಟಿ. ರವಿ, ಎಸ್.ಆರ್. ವಿಶ್ವನಾಥ್, ಸಿ.ಕೆ. ರಾಮಮೂರ್ತಿ, ಮುನಿರತ್ನ, ಬೈರತಿ ಬಸವರಾಜ್, ಛಲವಾದಿ ನಾರಾಯಣಸ್ವಾಮಿ, ಭಾರತಿ ಶೆಟ್ಟಿ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಬಂಧಿಸಿ ಬಸ್ಗಳಲ್ಲಿ ಕರೆದೊಯ್ದರು. ಇದೇ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ರಸ್ತೆಯಲ್ಲಿ ಬೆಂಕಿ ಹಚ್ಚಲು ಯತ್ನಿಸಿದರು. ಅದಕ್ಕೆ ಪೊಲೀಸರು ಅವಕಾಶ ಕೊಡಲಿಲ್ಲ.