ಗುಡ್‌ನ್ಯೂಸ್;‌ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸಲು ರಾಜ್ಯ ಸರ್ಕಾರ ಮುಂದು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸಲು ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ನಿರ್ಧರಿಸಿದ್ದು, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರೊಂದಿಗೆ ಚರ್ಚೆ ನಡೆಸಿದ್ದಾರೆ.

ನಿನ್ನೆಯಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರ್ಮಿಕ ಸಚಿವ ಸಂತೋಷ್ ಲಾಡ್, ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ದೆಹಲಿ ನಿವಾಸದಲ್ಲಿ ಭೇಟಿಯಾಗಿದ್ದು, ಈ ಬಗ್ಗೆ ಚರ್ಚೆ ನಡೆಸಿದ್ದಾರೆಂದು ತಿಳಿದುಬಂದಿದೆ.

ಅಮೆಜಾನ್, ಫ್ಲಿಪ್ ಕಾರ್ಟ್ ಸೇರಿದಂತೆ ಹತ್ತಾರು ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುವ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಅಗತ್ಯ ಕ್ರಮಗಳಿಗಾಗಿ ಮುಂದಾಗಿತ್ತು. ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರೂ ಗಿಗ್ ಕಾರ್ಮಿಕರ ಕಲ್ಯಾಣಕ್ಕಾಗಿ ಅವರ ಪರವಾಗಿ ಧ್ವನಿ ಎತ್ತಿದ್ದರು.

ಇದರ ಬೆನ್ನಲ್ಲೇ ರಾಹುಲ್ ಗಾಂಧಿಯವರನ್ನು ಭೇಟಿಯಾಗಿರುವ ಕೈ ನಾಯಕರು ಈ ಬಗ್ಗೆ ಚರ್ಚೆ ನಡೆಸಿದ್ದಾರೆ. ರಾಹುಲ್ ಗಾಂಧಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸಂತೋಷ್ ಲಾಡ್ ಅವರು, ಮಸೂದೆಯನ್ನು ಸಂಪುಟದ ಮುಂದೆ ಇರಿಸಲಾಗುವುದು. ಬಳಿಕ ಸುಗ್ರೀವಾಜ್ಞೆಯ ಮೂಲಕ ಕಾಯ್ದೆಯನ್ನು ಜಾರಿಗೆ ತರಲಾಗುವುದು. ರಾಹುಲ್ ಗಾಂಧಿ ಭೇಟಿ ವೇಳೆ ಐಟಿ/ಬಿಟಿ ಮತ್ತು ಕೈಗಾರಿಕಾ ಸಚಿವರು ಕೂಡ ಹಾಜರಿದ್ದರು. ಹೀಗಾಗಿ ಎದುರಾಗುವ ಸಮಸ್ಯೆಗಳ ಕುರಿತಂತೆಯೂ ಚರ್ಚೆಗಳ ನಡೆಸಲಾಗಿದೆ ಎಂದು ಹೇಳಿದರು.

ಸಭೆ ಫಲಪ್ರದವಾಗಿದ್ದು “ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ” ಸ್ಥಾಪಿಸುವ ತೀರ್ಮಾನಕ್ಕೆ ಬರಲಾಗಿದೆ. ಸಂಬಂಧಿತ ಸಂಸ್ಥೆಗಳಿಂದ ಶೇ5 ರಷ್ಟು ಸೆಸ್ ಸಂಗ್ರಹಿಸುವುದು ಮತ್ತು ಉಳಿದ ಅಗತ್ಯ ಹಣವನ್ನು ಸರ್ಕಾರವೇ ಭರಿಸಿ ಗಿಗ್ ಕಾರ್ಮಿಕರ ಕಲ್ಯಾಣಕ್ಕೆ ಯೋಜನೆಗಳನ್ನು ರೂಪಿಸುವುದು, ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!