ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೆಲಸ ಮಾಡುವ ಎಲ್ಲ ಕೂಲಿ ಕಾರ್ಮಿಕರ ಕೆಲಸದ ಅವಧಿಯಲ್ಲಿ ಶೇ.30ರಷ್ಟು ಕಡಿತಗೊಳಿಸಿ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.
ಈ ಆದೇಶ ಕಲಬುರಗಿ ಮತ್ತು ಬೆಳಗಾವಿ ವಿಭಾಗಗಳ ಎಲ್ಲ ಜಿಲ್ಲೆಗಳಲ್ಲಿ ಅನ್ವಯವಾಗಲಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ಪ್ರಸಕ್ತ ಸಾಲಿನ ಬೇಸಿಗೆಯಲ್ಲಿ ವಾಡಿಕೆಗಿಂತ ಹೆಚ್ಚು ತಾಪಮಾನ ಏರಿಕೆ ಹಿನ್ನೆಲೆಯಲ್ಲಿ ಹೆಚ್ಚಿನ ಬಿಸಿಲು ಇರುವ ಕಾರಣ ಈ ನಿರ್ಧಾರ ಮಾಡಲಾಗಿದೆ ಎಂದರು.
ಬೇಸಿಗೆಯಲ್ಲಿ ಕೆಲಸ ಮಾಡುವಾಗ ಎಲ್ಲ ಕಾರ್ಮಿಕರೂ ಯಥೇಚ್ಛವಾಗಿ ನೀರನ್ನು ಕುಡಿಯಬೇಕು. ಅಧಿಕಾರಿಗಳು ಕಾಮಗಾರಿ ಸ್ಥಳಗಳಲ್ಲಿ ಯೋಜನೆಯ ಮಾರ್ಗಸೂಚಿಯಂತೆ ಕಡ್ಡಾಯವಾಗಿ ನೆರಳು ಇರುವಂತೆ ಮಾಡಬೇಕು. ಶುದ್ಧ ಕುಡಿಯುವ ನೀರು, ಪ್ರಥಮ ಚಿಕಿತ್ಸಾ ಪೆಟ್ಟಿಗೆ ಮುಂತಾದ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಪ್ರಿಯಾಂಕ ಖರ್ಗೆ ತಿಳಿಸಿದ್ದಾರೆ.