ಹೊಸದಿಗಂತ ಡಿಜಿಟಲ್ ಡೆಸ್ಕ್ :
ವಿದ್ಯಾರ್ಥಿಗಳ ಜನಿವಾರ ಕಳಚಿಸಿರುವ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ಕೊಡಲು ಸರ್ಕಾರ ಬದ್ಧ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಬೆಳ್ತಂಗಡಿಯಲ್ಲಿ ಭಾನುವಾರ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, ಧರ್ಮ ಯಾವುದಾದರೂ ತತ್ವ ಒಂದೇ, ನಾಮ ನೂರಾದರೂ ದೈವ ಒಂದೇ, ಪೂಜೆ ಯಾವುದಾದರೂ ಭಕ್ತಿ ಒಂದೇ. ಕರ್ಮ ಹಲವಾದರೂ ನಿಷ್ಠೆ ಒಂದೇ, ದೇವನೊಬ್ಬ ನಾಮ ಹಲವು. ನಾವು ಹುಟ್ಟುವಾಗ ಇಂತಹುದೇ ಜಾತಿ, ಧರ್ಮದಲ್ಲಿ ಹುಟ್ಟಬೇಕು ಎಂದು ಅರ್ಜಿ ಹಾಕಿ ಹುಟ್ಟಿಲ್ಲ. ನಾವು ಜಾತಿ ಧರ್ಮ ಬೇಡ ಎಂದು ಎಷ್ಟೇ ಹೇಳಿದರೂ, ನಮ್ಮ ಹುಟ್ಟು ಹಾಗೂ ಸಾವು ನಮ್ಮ ಜಾತಿ ಹಾಗೂ ಧರ್ಮಗಳನ್ನು ನೆನಪಿಸುತ್ತದೆ ಎಂದರು.
ಅಮ್ಮನ ನೆನಪು ಪ್ರೀತಿಯ ಮೂಲ, ಗುರುವಿನ ನೆನಪು ಜ್ಞಾನದ ಮೂಲ, ದೇವರ ನೆನಪು ಭಕ್ತಿಯ ಮೂಲ, ಈ ಮೂರರ ನೆನಪು ಮನುಷ್ಯತ್ವದ ಮೂಲ, ಮನುಷ್ಯತ್ವ ಮೋಕ್ಷಕ್ಕೆ ಮೂಲ. ಅದೇ ರೀತಿ ನಾವು ಇಂದು ಜ್ಞಾನ, ಗುರು, ದೇವರನ್ನು ಸ್ಮರಿಸಲು ಇಲ್ಲಿ ಸೇರಿದ್ದೇವೆ. ನಿಮ್ಮೆಲ್ಲರಿಗೂ ಒಳ್ಳೆಯದಾಗಲಿ ಎಂದು ಶೃಂಗೇರಿಯ ಶಾರದಾ ಪೀಠದ ಶ್ರೀಗಳು ಕಾರ್ಯಕ್ರಮದಲ್ಲಿ ಜ್ಯೋತಿ ಬೆಳಗಿದ್ದಾರೆ ಎಂದರು.