ಹೊಸದಿಗಂತ ವರದಿ ಹಾಸನ:
ಹಿಂದುಗಳನ್ನು ಗುರಿಯಾಗಿಸಿಕೊಂಡು ಜಮ್ಮು-ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿ ಹಾಗೂ ಪಶ್ಚಿಮ ಬಂಗಾಳದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ಹಿಂಸಾಚಾರ ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಇಂದು (ಗುರುವಾರ) ನಗರದಲ್ಲಿ ಪ್ರತಿಭಟನೆ ನಡೆಸಲಿದ್ದು, ಸ್ವಯಂ ಪ್ರೇರಿತ ಬಂದ್ ಮೂಲಕ ಬೆಂಬಲ ಸೂಚಿಸುವಂತೆ ವರ್ತಕರಲ್ಲಿ ಮನವಿ ಮಾಡಿದ್ದಾರೆ.
ನಗರದ ಹೇಮಾವತಿ ವೃತ್ತದಿಂದ ಬೆಳಗ್ಗೆ ೧೦ ಗಂಟೆಗೆ ಪ್ರತಿಭಟನಾ ಮೆರವಣಿಗೆ ಆರಂಭವಾಗಲಿದ್ದು, ಉಗ್ರರ ದಾಳಿಯಿಂದ ಹತ್ಯೆಯಾದವರ ಸ್ಮರನಾರ್ಥ ಪ್ರತಿಭಟನೆ ಆರಂಭದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಗುವುದು. ಅಲ್ಲಿಂದ ಮುಂದೆ ಸಾಗಿ, ಎನ್.ಆರ್.ವೃತ್ತದ ಬಳಿ ಮಾನವ ಸರಪಳಿ ನಿರ್ಮಿಸಲಾಗುವುದು. ಬಳಿಕ ಜಿಲ್ಲಾಧಿಕಾರಿ ಕಚೆರಿ ಎದುರು ಕೆಲಕಾಲ ಧರಣಿ ನಡೆಸಿ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.
ಪ್ರತಿಭಟನಾ ಸಮಯದಲ್ಲಿ ವರ್ತಕರು ತಮ್ಮ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡುವ ಮೂಲಕ ಪ್ರತಿಭಟನೆಗೆ ಬೆಂಬಲ ಸೂಚಿಸಬೇಕು ಎಂದು ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ನಗರದ ವರ್ತಕರ ಬಳಿ ತೆರಳಿ ಮನವಿ ಮಾಡಿದ್ದಾರೆ.