ಹೊಸದಿಗಂತ ವರದಿ ಬೆಳಗಾವಿ:
ನಗರದಲ್ಲಿ ಸೋಮವಾರ ಆಯೋಜಿಸಿದ್ದ ಕಾಂಗ್ರೆಸ್ ಸಂವಿಧಾನ ರಕ್ಷಣಾ ಕಾರ್ಯಕ್ರಮಕ್ಕೆ ನುಗ್ಗಿದ ಬಿಜೆಪಿ ಮಹಿಳಾ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ವಿರುದ್ಧ ಕಪ್ಪು ಬಾವುಟ ಪ್ರದರ್ಶನ ಮಾಡಿದ ಘಟನೆ ನಡೆಯಿತು.
ಕಾಂಗ್ರೆಸ್ ನ ಪ್ರಮುಖ ನಾಯಕರ ಭಾಫಣದ ಬಳಿಕ ಸಿದ್ದರಾಮಯ್ಯ ಮಾತನಾಡುವ ವೇಳೆ ಈ ಘಟನೆ ನಡೆದಿದ್ದು, ಕಾರ್ಯಕ್ರಮದ ವೇದಿಕೆ ಹೈಡ್ರಾಮಾಕೆ ಕಾರಣವಾಯಿತು. ಸಿದ್ದರಾಮಯ್ಯ ಮಾತು ಆರಂಭಿಸುತ್ತಿದ್ದಂತೆ ಕಪ್ಪು ಬಾವುಟದೊಂದಿಗೆ ಘೋಷಣೆಗಳನ್ನು ಕೂಗಿದ ಬಿಜೆಪಿ ಮಹಿಳಾ ಕಾರ್ಯಕರ್ತರೆಯರು ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ವಾಹನದಲ್ಲಿ ಕರೆದುಕೊಂಡು ಹೊರಟಾಗ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿದರು. ಈ ಸಂದರ್ಭದಲ್ಲಿ ಪರಿಸ್ಥಿತಿ ಕೈ ಮೀರುವ ಹಂತಕ್ಕೆ ತಲುಪಿತು. ವಶಕ್ಕೆ ಪಡೆದ ಪ್ರತಿಭಟನಾಕಾರರನ್ನು ಕರೆದೊಯ್ಯಲು ಪೊಲೀಸರು ಹರಸಾಹಸ ಪಡಬೇಕಾಯಿತು.
ಬಿಜೆಪಿ ಕಾರ್ಯಕರ್ತರ ಹಠಾತ್ ಪ್ರತಿಭಟನೆಯಿಂದಾಗಿ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.
ಈ ಘಟನೆ ನಡೆಯುತ್ತದ್ದಂತೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಸಚಿವರು ಶಾಸಕರು ಕೂಡ ಇದರಿಂದಾಗಿ ಗೊಂದಲಕ್ಕೆ ಒಳಗಾಗದರಲ್ಲದೇ, ಪೊಲೀಸ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗವೂ ನಡೆಯಿತು.
ಬಂಧಿತ ಬಿಜೆಪಿ ಕಾರ್ಯಕರ್ತರನ್ನು ಕ್ಯಾಂಪ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.