ಹೊಸದಿಗಂತ ಶಿವಮೊಗ್ಗ:
ಪ್ರಸ್ತುತ ಪರಿಸ್ಥಿತಿಯಲ್ಲಿ ರಾಜಕೀಯ ಬದಿಗಿಟ್ಟು ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡುತ್ತೇವೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಮಾಧ್ಯಮದವರ ಜೊತೆಗೆ ಮಾತನಾಡಿ, ಭಾರತ ಮತ್ತು ಪಾಕಿಸ್ತಾನದ ನಡುವೆ ಸಂಘರ್ಷ ನಡೆಯುತ್ತಿದೆ. ಸದ್ಯ ಉದ್ವಿಘ್ನ ವಾತಾವರಣ ನಿರ್ಮಾಣವಾಗಿದೆ. ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತಿದೆ. ಪರಿಸ್ಥಿತಿಗೆ ಅನುಗುಣವಾಗಿ ಕೇಂದ್ರ ಕ್ರಮ ಕೈಗೊಳ್ಳುತ್ತದೆ ಎಂಬ ವಿಶ್ವಾಸವಿದೆ ಎಂದರು.
ಕೇಂದ್ರದ ನಿರ್ಧಾರಕ್ಕೆ ನಾವು ಈಗಾಗಲೇ ಬೆಂಬಲ ವ್ಯಕ್ತಪಡಿಸಿದ್ದೇವೆ. ರಾಜಕೀಯ ಬದಿಗಿಟ್ಟು ನಾವು ಬೆಂಬಲ ಸೂಚಿಸಿದ್ದೇವೆ. ಎರಡು ದೇಶಗಳ ನಡುವೆ ನಡೆಯುತ್ತಿರುವ ಸಂಘರ್ಷ ರಾಜ್ಯದ ಮೇಲೆ ಸದ್ಯಕ್ಕೆ ಯಾವುದೇ ಪರಿಣಾಮ ಬೀರುವುದಿಲ್ಲ. ಸದ್ಯ ಸಂಘರ್ಷದ ಪರಿಣಾಮ ಪಂಜಾಬ್, ರಾಜಸ್ಥಾನ್, ಜಮ್ಮು- ಕಾಶ್ಮೀರದ ಮೇಲೆ ಕೇಂದ್ರೀಕೃತವಾಗಿದೆ. ಕರ್ನಾಟಕದ ಮೇಲೆ ಪರಿಣಾಮ ಬೀಳುವ ಸಾಧ್ಯತೆ ತುಂಬಾ ಕಡಿಮೆ ಇದೆ. ಆದಾಗ್ಯೂ ಸಂಪುಟದ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗುವುದು ಎಂದರು.