ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುರುವಾರ ಪಾಕಿಸ್ತಾನ ನಡೆಸಿದ ದೊಡ್ಡ ಪ್ರಮಾಣದ ಡ್ರೋನ್ ದಾಳಿ ವಿಫಲವಾದ ನಂತರ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ರಾಷ್ಟ್ರ ರಾಜಧಾನಿಯಲ್ಲಿರುವ ರಕ್ಷಣಾ ಸಚಿವಾಲಯದ ನೆಲೆಯಾಗಿರುವ ಸೌತ್ ಬ್ಲಾಕ್‌ನಲ್ಲಿ ದೇಶದ ಪ್ರಸ್ತುತ ಭದ್ರತಾ ಪರಿಸ್ಥಿತಿಯ ಪರಿಶೀಲನೆ ನಡೆಸಿದರು.
ರಕ್ಷಣಾ ಸಚಿವರೊಂದಿಗೆ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್, ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ ತ್ರಿಪಾಠಿ, ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಮತ್ತು ರಕ್ಷಣಾ ಕಾರ್ಯದರ್ಶಿ ಆರ್‌ಕೆ ಸಿಂಗ್ ಸೇರಿದಂತೆ ಸೇನಾ ಉನ್ನತ ಅಧಿಕಾರಿಗಳು ಭಾಗಿಯಾಗಿದ್ದರು.
ಬುಧವಾರ ಭಾರತೀಯ ಸಶಸ್ತ್ರ ಪಡೆಗಳು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಒಂಬತ್ತು ಭಯೋತ್ಪಾದಕ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ನಡೆಸಿದ ಆಪರೇಷನ್ ಸಿಂದೂರ್ ನಂತರ ಪಾಕಿಸ್ತಾನ ಪ್ರತೀಕಾರ ತೀರಿಸಿಕೊಳ್ಳಲು ಪ್ರಯತ್ನಿಸಿದ ನಂತರ ಈ ಸಭೆ ನಡೆದಿದೆ.
ಮೇ 8 ಮತ್ತು ಮೇ 9 ರ ಮಧ್ಯರಾತ್ರಿಯಲ್ಲಿ ಭಾರತೀಯ ಸೇನೆಯು ಜಮ್ಮು ಮತ್ತು ಕಾಶ್ಮೀರದಲ್ಲಿ ಪಶ್ಚಿಮ ಗಡಿ ಮತ್ತು ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ನಡೆಸಿದ ಬಹು ಡ್ರೋನ್ ದಾಳಿಗಳನ್ನು ಯಶಸ್ವಿಯಾಗಿ ಹಿಮ್ಮೆಟ್ಟಿಸಿತು ಮತ್ತು ತಕ್ಕ ಪ್ರತಿಕ್ರಿಯೆ ನೀಡಿದೆ .