ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರ ಸರಕಾರದಿಂದ 4,195 ಕೋಟಿ ರೂ. ಗಳ ಪಾಲು ಬಿಡುಗಡೆಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧದಲ್ಲಿ ಬುಧವಾರ ಅವರು ಮಾತನಾಡಿದ್ದು, ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಬಾಕಿಯಿರುವ ಅನುದಾನವನ್ನು ಒದಗಿಸುವಂತೆ ಪ್ರಧಾನಮಂತ್ರಿಯವರನ್ನು, ಕೇಂದ್ರ ವಿತ್ತಸಚಿವರನ್ನೂ ಈಗಾಗಲೇ ಭೇಟಿ ಮಾಡಿ ಮನವಿ ಸಲ್ಲಿಸಿದ್ದೇವೆ. ರಾಜ್ಯದ ಸಂಸದರು, ರಾಜ್ಯಸಭಾ ಸದಸ್ಯರು ಕೇಂದ್ರವನ್ನು ಒತ್ತಾಯಿಸಿ ಬಾಕಿ ಅನುದಾನವನ್ನು ತರಲು ಪ್ರಯತ್ನಿಸಬೇಕೆಂದು ತಿಳಿಸಿದರು.
ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲಿಸಲು ರಚಿಸಲಾದ ಮುಖ್ಯಮಂತ್ರಿಗಳ ಅಧ್ಯಕ್ಷತೆಯ ರಾಜ್ಯ ಮಟ್ಟದ ದಿಶಾ ಸಮಿತಿ ಸಭೆಯನ್ನು ಇಂದು ನಡೆಸಲಾಗಿದೆ. 67 ಕೇಂದ್ರ ಪುರಸ್ಕೃತ ಯೋಜನೆಗಳಿದ್ದು, ಅವುಗಳ ಪ್ರಗತಿಪರಿಶೀಲನೆ ನಡೆಸಲಾಗಿದೆ. ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ಕೇಂದ್ರ ಹಾಗೂ ರಾಜ್ಯದ ಪಾಲು 50:50 , 60:40 , 70:30 ರಷ್ಟಿರುತ್ತದೆ. ಕರ್ನಾಟಕದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳಿಗೆ 46,859 ಕೋಟಿ ಖರ್ಚು ಮಾಡಲಾಗುತ್ತಿದೆ. 2024-25ರ ಸಾಲಿನಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳಡಿ ರಾಜ್ಯದ ಅನುದಾನ 24,960 ಕೋಟಿ ರೂಪಾಯಿಗಳು, ಕೇಂದ್ರದ ಅನುದಾನ 22,758ಕೋಟಿ ರೂಪಾಯಿಗಳಿದ್ದು ಕೇಂದ್ರದಿಂದ 18,561 ಕೋಟಿ ಮಾತ್ರ ಬಿಡುಗಡೆ ಆಗಿದೆ 4,195 ಕೋಟಿ ರೂಪಾಯಿಗಳು ಬಿಡುಗಡೆ ಆಗಿರುವುದಿಲ್ಲ ಎಂದರು.