ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನ ಗಡಿಯಾಚೆಗಿನ ಭಯೋತ್ಪಾದನೆಗೆ ತನ್ನ ಬೆಂಬಲವನ್ನು ತ್ಯಜಿಸುವವರೆಗೆ ಸಿಂಧೂ ಜಲ ಒಪ್ಪಂದ ಅಮಾನತು ಮುಂದುವರಿಯಲಿದೆ ಎಂದು ಕೇಂದ್ರ ಜಲಶಕ್ತಿ ಸಚಿವಾಲಯವು ಕ್ಯಾಬಿನೆಟ್ ಕಾರ್ಯದರ್ಶಿಗೆ ತಿಳಿಸಿದೆ.
ಕ್ಯಾಬಿನೆಟ್ ಕಾರ್ಯದರ್ಶಿ ಟಿವಿ ಸೋಮನಾಥನ್ ಅವರಿಗೆ ನೀಡಿದ ಮಾಸಿಕ ವರದಿಯಲ್ಲಿ, ಜಲಶಕ್ತಿ ಸಚಿವಾಲಯದ ಅಡಿಯಲ್ಲಿ ಬರುವ ಜಲಸಂಪನ್ಮೂಲ, ನದಿ ಅಭಿವೃದ್ಧಿ ಮತ್ತು ಗಂಗಾ ಪುನರುಜ್ಜೀವನ ಇಲಾಖೆಯ ಕಾರ್ಯದರ್ಶಿ ದೇಬಶ್ರೀ ಮುಖರ್ಜಿ ಅವರು, ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದಕ ದಾಳಿಯ ನಂತರ ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸಲಾಗಿದ್ದು, ಅದು ಮುಂದುವರೆಯಲಿದೆ ಎಂದು ಹೇಳಿದ್ದಾರೆ.
ಪಾಕಿಸ್ತಾನವು ಗಡಿಯಾಚೆಗಿನ ಭಯೋತ್ಪಾದನೆಗೆ ತನ್ನ ಬೆಂಬಲವನ್ನು ವಿಶ್ವಾಸಾರ್ಹವಾಗಿ ಮತ್ತು ಬದಲಾಯಿಸಲಾಗದಂತೆ ತ್ಯಜಿಸುವವರೆಗೆ ಪ್ರಮುಖ ನೀರು ಹಂಚಿಕೆ ಒಪ್ಪಂದವನ್ನು ಅಮಾನತುಗೊಳಿಸಲಾಗುತ್ತದೆ ಎಂದು ಮುಖರ್ಜಿ ತಮ್ಮ ವರದಿಯಲ್ಲಿ ತಿಳಿಸಿದ್ದಾರೆ.
ಭಾರತ ಮತ್ತು ಪಾಕಿಸ್ತಾನದ ನಡುವೆ 1960 ರಲ್ಲಿ ವಿಶ್ವಬ್ಯಾಂಕ್ ಮಧ್ಯಸ್ಥಿಕೆ ವಹಿಸಿದ ಸಿಂಧೂ ಜಲ ಒಪ್ಪಂದ(IWT) ಸಿಂಧೂ ನದಿ ಮತ್ತು ಅದರ ಉಪನದಿಗಳ ನೀರಿನ ಹಂಚಿಕೆ ಮತ್ತು ಬಳಕೆಯನ್ನು ನಿಯಂತ್ರಿಸುತ್ತದೆ.