ಹೊಸದಿಗಂತ ಚಿತ್ರದುರ್ಗ:
ದಾವಣಗೆರೆ -ಚಿತ್ರದುರ್ಗ- ತುಮಕೂರು ನೇರ ರೈಲ್ವೆ ಯೋಜನೆಯನ್ನು 2025ರ ಡಿಸೆಂಬರ್ ಅಂತ್ಯಕ್ಕೆ ಪೂರ್ಣಗೊಳಿಸಿ, ಲೋಕಾರ್ಪಣೆಗೊಳಿಸಲಾಗುವುದು ಎಂದು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ದಾವಣಗೆರೆ-ಚಿತ್ರದುರ್ಗ-ತುಮಕೂರು ನೂತನ ರೈಲ್ವೆ ಮಾರ್ಗದ ಕಾಮಗಾರಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲ್ವೆ ಯೋಜನೆಯ ಸಮಸ್ಯೆಯನ್ನು ಬಗೆಹರಿಸಿ, ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ, ಶೀಘ್ರವಾಗಿ ಕಾಮಗಾರಿ ಅನುಷ್ಠಾನಗೊಳಿಸಲಾಗುವುದು. ದಾವಣಗೆರೆ -ಚಿತ್ರದುರ್ಗ- ತುಮಕೂರು ನೇರ ರೈಲ್ವೆ ಯೋಜನೆ ಹಾಗೂ ತುಮಕೂರು-ರಾಯದುರ್ಗ ರೈಲ್ವೆ ಮಾರ್ಗವನ್ನು ೨೦೨೭ ರ ಡಿಸೆಂಬರ್ ಅಂತ್ಯಕ್ಕೆ ಪೂರ್ಣಗೊಳಿಸಿ ಏಕಕಾಲಕ್ಕೆ ಲೋಕಾರ್ಪಣೆ ಮಾಡಲಾಗುವುದು ಎಂದು ಹೇಳಿದರು.
ಎಲ್ಲ ರೈಲ್ವೆ ಕೆಳ ಸೇತುವೆಗಳಲ್ಲಿನ ಪರಿಸ್ಥಿತಿ ಕುರಿತು ವರದಿ :
ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಹಾಗೂ ಸಂಸದ ಗೋವಿಂದ ಕಾರಜೋಳ ಅವರು ಹೇಳುತ್ತಿರುವಂತೆ ರೈಲ್ವೆ ಕೆಳ ಸೇತುವೆಯಲ್ಲಿ ಉಂಟಾಗಿರುವ ಸಮಸ್ಯೆಯ ಬಗ್ಗೆ ಕೈಗೊಳ್ಳಲು ಅಧಿಕಾರಿಗಳಿಗೆ ಈ ಹಿಂದೆಯೇ ಸೂಚನೆ ನೀಡಿದ್ದೆ. ಆದರೆ ಇನ್ನೂ ಸಮಸ್ಯೆ ಬಗೆಹರಿದಿಲ್ಲ. ಜಿಲ್ಲೆಯಾದ್ಯಂತ ಇರುವ ರೈಲ್ವೆ ಕೆಳ ಸೇತುವೆಗಳಲ್ಲಿ ಮಳೆನೀರು ಶೇಖರಣೆಯಾಗದಂತೆ ಸೂಕ್ತ ಕ್ರಮಕೈಗೊಳ್ಳಬೇಕು. ಎಲ್ಲ ರೈಲ್ವೆ ಕೆಳ ಸೇತುವೆಗಳ ಬಗ್ಗೆ ರೈಲ್ವೆ ಅಧಿಕಾರಿಗಳು ಖುದ್ದು ಭೇಟಿ ನೀಡಿ, ಅಲ್ಲಿನ ವಸ್ತುಸ್ಥಿತಿ ಬಗ್ಗೆ ಹಾಗೂ ಸಮಸ್ಯೆಗಳಿದ್ದಲ್ಲಿ, ಅದರ ನಿವಾರಣೆಗೆ ಕೈಗೊಳ್ಳಬೇಕಾದ ಕಾರ್ಯಗಳ ಬಗ್ಗೆ ಸಮಗ್ರ ವರದಿ ಸಲ್ಲಿಸಬೇಕು ಎಂದರು.
ನೇರ ರೈಲ್ವೆ ಮಾರ್ಗದಲ್ಲಿನ ಬಾಕಿ ಇರುವ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ : ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲ್ವೆ ಮಾರ್ಗದಲ್ಲಿ ಈಗಾಗಲೆ ಶೇ.೯೦ ರಷ್ಟು ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದೆ. ಆದರೆ ಇನ್ನೂ ಕೆಲವೆಡೆ ಭೂಸ್ವಾಧೀನ ಪ್ರಕ್ರಿಯೆ ನಾನಾ ಕಾರಣಗಳಿಂದಾಗಿ ಬಾಕಿ ಉಳಿದಿದೆ. ಬಾಕಿ ಉಳಿದಿರುವ ಎಲ್ಲ ಭೂಸ್ವಾಧೀನ ಕಾರ್ಯದ ಪ್ರಕ್ರಿಯೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ, ರೈಲ್ವೆ ಇಲಾಖೆಗೆ ಭೂಮಿ ಹಸ್ತಾಂತರಿಸಿದಲ್ಲಿ, ಅವರು ಕಾಮಗಾರಿ ಕೈಗೊಳ್ಳಲು ಅನುಕೂಲವಾಗಲಿದೆ ಎಂದು ಸೂಚನೆ ನೀಡಿದರು.
ಕಾರ್ಗೋ ಎಕನಾಮಿಕ್ ಕಾರಿಡಾರ್‌ಗೆ ಟಿ.ಬಿ.ಜಯಚಂದ್ರ ಮನವಿ :
ದಾವಣಗೆರೆ-ತುಮಕೂರು ನೇರ ರೈಲ್ವೆ ಮಾರ್ಗ ನಿರ್ಮಾಣವಾಗುತ್ತಿದ್ದು, ಈ ಮಾರ್ಗದಲ್ಲಿ ಬರುವ ಶಿರಾ ಬಳಿ ಅಥವಾ ಈ ಮಾರ್ಗದಲ್ಲಿ ರೈಲ್ವೆ ಇಲಾಖೆ ನಿರ್ಧರಿಸುವ ಯಾವುದೇ ಸ್ಥಳದಲ್ಲಿ ರೈಲ್ವೆ ಕಾರ್ಗೋ ಕಾರಿಡಾರ್ ನಿರ್ಮಾಣ ಮಾಡುವಂತೆ ಸಿರಾ ಶಾಸಕ ಹಾಗೂ ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಅವರು ರೈಲ್ವೆ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಸಂಸದ ಗೋವಿಂದ ಎಂ. ಕಾರಜೋಳ, ಶಾಸಕರಾದ ಟಿ.ರಘುಮೂರ್ತಿ, ಡಾ.ಎಂ.ಚಂದ್ರಪ್ಪ, ಕೆ.ಸಿ.ವೀರೇಂದ್ರ ಪಪ್ಪಿ, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ರೈಲ್ವೆ ಇಲಾಖೆ ಮುಖ್ಯ ಆಡಳಿತಾಧಿಕಾರಿ (ನಿರ್ಮಾಣ) ಅಜಯ್ ಶರ್ಮಾ, ವಿಭಾಗೀಯ ರೈಲ್ವೆ ವ್ಯವಸ್ಥಾಪಕ (ಡಿಜಿಎಂ) ಮುದಿತ್ ಮಿತ್ತಲ್, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿ.ಪಂ. ಸಿಇಒ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಷಿ, ನೇರ ರೈಲ್ವೆ ಯೋಜನೆ ವಿಶೇಷ ಭೂಸ್ವಾಧೀನಾಧಿಕಾರಿ ವೆಂಕಟೇಶ್, ಸೇರಿದಂತ ರೈಲ್ವೆ ಇಲಾಖೆ ಅಧಿಕಾರಿಗಳು ಹಾಜರಿದ್ದರು.