ಹೊಸದಿಗಂತ ವರದಿ ಗೋಕರ್ಣ:
ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಪುಣ್ಯಕ್ಷೇತ್ರ ಗೋಕರ್ಣಕ್ಕೆ ಭೇಟಿ ನೀಡಿ ಶ್ರೀಮಹಾಬಲೇಶ್ವರ ದೇವಸ್ಥಾನದಲ್ಲಿ ದರ್ಶನ ಪಡೆದು ಆತ್ಮಲಿಂಗ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ದಕ್ಷಿಣ ಭಾರತದ ಸುಪ್ರಸಿದ್ಧ ಕ್ಷೇತ್ರ ಗೋಕರ್ಣದಲ್ಲಿ ಪೂಜೆ ಸಲ್ಲಿಸಿರುವುದು ಮನಸ್ಸಿಗೆ ನೆಮ್ಮದಿ ನೀಡಿದೆ, ಗೋಕರ್ಣ ಕ್ಷೇತ್ರದ ಅಭಿವೃದ್ಧಿಗೆ ರಾಜ್ಯದಿಂದ ಪ್ರಸ್ತಾವನೆ ಬಂದರೆ ಉತ್ತರದ ಕಾಶಿ ವಿಶ್ವನಾಥ ಕಾರಿಡಾರ್ ಉಜ್ಜಯನಿಯ ಮಹಾಕಾಲ ಕಾರಿಡಾರ್ ಮಾದರಿಯಲ್ಲಿ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಕ್ರಮಗಳನ್ನು ಕೈಗೊಳ್ಳಲಿದೆ ಎಂದರು.
ಪ್ರವಾಸೋದ್ಯಮ ಇಲಾಖೆಯಿಂದ ಗೋಕರ್ಣ ಅಭಿವೃದ್ಧಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ಇಲಾಖೆಗೆ ಸೂಚಿಸುವುದಾಗಿ ಕೇಂದ್ರ ಪ್ರವಾಸೋದ್ಯಮ ಸಚಿವರು ಈ ಸಂದರ್ಭದಲ್ಲಿ ತಿಳಿಸಿದರು. ಗೋಕರ್ಣಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಶೇಖಾವತ್ ಅವರಿಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಸ್ವಾಗತಿಸಿ ಉತ್ತರ ಕನ್ನಡ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಮನವಿ ಸಲ್ಲಿಸಿದರು.
ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ, ಕುಮಟಾ ಶಾಸಕ ದಿನಕರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.