ಪಿಎಂ ಇ-ಡ್ರೈವ್ ಯೋಜನೆ: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ ಹಂಚಿಕೆ ಭರವಸೆ ನೀಡಿದ ಹೆಚ್.ಡಿ. ಕುಮಾರಸ್ವಾಮಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆ ಯೋಜನೆ ಪಿಎಂ ಇ-ಡ್ರೈವ್ ಅಡಿಯಲ್ಲಿ ರಾಷ್ಟ್ರದ ಐದು ಪ್ರಮುಖ ನಗರಗಳಿಗೆ 10,900 ಎಲೆಕ್ಟ್ರಿಕ್ ಬಸ್​ಗಳನ್ನು ಹಂಚಿಕೆ ಮಾಡಲು ನಿರ್ಧರಿಸಲಾಗಿದೆ. ಈ ಪೈಕಿ ಬೆಂಗಳೂರು ನಗರಕ್ಕೆ 4,500 ಬಸ್​ಗಳನ್ನು ಹಂಚಿಕೆ ಮಾಡುವ ಭರವಸೆ ನೀಡಲಾಗಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದರು.

ದೆಹಲಿಯ ಬೃಹತ್ ಕೈಗಾರಿಕೆ ಸಚಿವಾಲಯದಲ್ಲಿ ಎಲೆಕ್ಟ್ರಿಕ್ ಬಸ್ ಹಂಚಿಕೆಯ ಸಂಬಂಧ ಕರ್ನಾಟಕ, ತೆಲಂಗಾಣ, ಗುಜರಾತ್ ಹಾಗೂ ದೆಹಲಿ ರಾಜ್ಯಗಳ ಅಧಿಕಾರಿಗಳ ಜತೆ ಸಭೆ ನಡೆಸಿದರು. ಸಭೆಯಲ್ಲಿ ಎಲೆಕ್ಟ್ರಿಕ್ ಬಸ್​ಗಳ ಬಳಕೆ ಹಾಗೂ ಅವುಗಳ ನಿರ್ವಹಣೆಗೆ ಅಗತ್ಯವಾದ ಪೂರಕ ಮೂಲಸೌಕರ್ಯವನ್ನು ಒದಗಿಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಸಚಿವರು, ಮಾಲಿನ್ಯರಹಿತ ಸಮೂಹ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಲಪಡಿಸುವುದು ರಾಷ್ಟ್ರೀಯ ಅಗತ್ಯ ಎಂದು ತಿಳಿಸಿದರು.

ಕರ್ನಾಟಕದ ಪರವಾಗಿ ಸಭೆಯಲ್ಲಿ ಹಾಜರಿದ್ದ ಸಾರಿಗೆ ಇಲಾಖೆಯ ಕಾರ್ಯದರ್ಶಿ ಎನ್.ವಿ. ಪ್ರಸಾದ್ ಅವರು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗಾಗಿ (BMTC) 7,000 ಎಲೆಕ್ಟ್ರಿಕ್ ಬಸ್​ಗಳಿಗೆ ಬೇಡಿಕೆ ಸಲ್ಲಿಸಿದರು. ಈ ಬೇಡಿಕೆ ಹಾಗೂ ಜನಸಂಖ್ಯೆಯನ್ನು ಪರಿಗಣಿಸಿ ಮೊದಲ ಹಂತದಲ್ಲಿಯೇ ಬಿಎಂಟಿಸಿಗೆ 4,500 ಬಸ್​ಗಳನ್ನು ಒದಗಿಸುವ ಭರವಸೆ ನೀಡಿದ ಕೇಂದ್ರ ಸಚಿವರು, ದೇಶದ ಇತರೆ ನಗರಗಳಿಗೆ ಹೋಲಿಸಿದರೆ ಬೆಂಗಳೂರು ನಗರಕ್ಕೆ ಅತ್ಯಧಿಕ ಬಸ್​ಗಳನ್ನು ಹಂಚಿಕೆ ಮಾಡುವುದಾಗಿ ತಿಳಿಸಿದರು.

ದೆಹಲಿ ಸಾರಿಗೆ ಸಂಸ್ಥೆ 2,800 ಬಸ್​ಗಳಿಗೆ ಬೇಡಿಕೆ ಇಟ್ಟಿದ್ದು, ಅಷ್ಟೂ ಬಸ್​ಗಳನ್ನು ಒದಗಿಸುವ ಭರವಸೆಯನ್ನು ಕೇಂದ್ರ ಸಚಿವರು ನೀಡಿದರು.

ಉಳಿದಂತೆ ಸೂರತ್ ನಗರ ಸಾರಿಗೆ ಸಂಸ್ಥೆ 600 ಬಸ್​ಗಳಿಗೆ ಬೇಡಿಕೆ ಇಟ್ಟಿದ್ದು, ಅಷ್ಟೂ ಬಸ್​ಗಳನ್ನು ಹಂಚಿಕೆ ಮಾಡುವ ಭರವಸೆ ನೀಡಲಾಗಿದೆ. ಅಹಮದಾಬಾದ್ ನಗರಕ್ಕೆ 1,000 ಬಸ್ ಕೇಳಲಾಗಿದ್ದು, ಅಷ್ಟೂ ಬಸ್​ಗಳನ್ನೂ ಹಂಚಿಕೆ ಮಾಡುವುದಕ್ಕೆ ಸಚಿವರು ಒಪ್ಪಿಗೆ ನೀಡಿದರು.

ತೆಲಂಗಾಣದ ರಾಜಧಾನಿ ಹೈದರಾಬಾದ್ ನಗರ ಸಾರಿಗೆ ಸಂಸ್ಥೆ 2,800 ವಿದ್ಯುತ್ ಚಾಲಿತ ಬಸ್​ಗಳಿಗೆ ಬೇಡಿಕೆ ಇಟ್ಟಿತ್ತು. ಆ ಪೈಕಿ 2,000 ಬಸ್​ಗಳನ್ನು ಹಂಚಿಕೆ ಮಾಡುವ ಬಗ್ಗೆ ಸಚಿವರು ಭರವಸೆ ನೀಡಿದರು.

ಒಟ್ಟಾರೆಯಾಗಿ ಐದೂ ನಗರಗಳಿಂದ 14,200 ಬಸ್​ಗಳಿಗೆ ಬೇಡಿಕೆ ಬಂದಿತ್ತು. ಆ ಪೈಕಿ 10,900 ಬಸ್​ಗಳನ್ನು ಮೊದಲ ಹಂತದಲ್ಲಿ ಹಂಚಿಕೆ ಮಾಡಲಾಗುತ್ತಿದೆ ಎಂದ ಕೇಂದ್ರ ಸಚಿವರು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!