ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ವಿರುದ್ಧ ಬರೋಬ್ಬರಿ 2,200 ಕೋಟಿ ರೂ. ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸಿಬಿಐ ಚಾರ್ಜ್‌ಶೀಟ್ ಸಲ್ಲಿಸಿದೆ.
ಕಿರು ಜಲವಿದ್ಯುತ್ ಯೋಜನೆಗೆ 2,200 ಕೋಟಿ ರೂ.ಗಳ ನಾಗರಿಕ ಕಾಮಗಾರಿಗಳ ಮಂಜೂರಾತಿಯಲ್ಲಿ ಭ್ರಷ್ಟಾಚಾರ ನಡೆದಿದೆ. ಪ್ರಕರಣದಲ್ಲಿ ಸತ್ಯಪಾಲ್ ಮಲಿಕ್ ಮತ್ತು ಇತರ ಏಳು ಜನರ ವಿರುದ್ಧ ಸಿಬಿಐ (CBI) ಆರೋಪಪಟ್ಟಿ ಸಲ್ಲಿಸಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಮೂರು ವರ್ಷಗಳ ತನಿಖೆಯ ನಂತರ ವಿಶೇಷ ನ್ಯಾಯಾಲಯದ ಮುಂದೆ ಸಿಬಿಐ ತನ್ನ ಆರೋಪಪಟ್ಟಿಯನ್ನು ಸಲ್ಲಿಸಿದ್ದು, ಮಲಿಕ್ ಮತ್ತು ಅವರ ಇಬ್ಬರು ಸಹಾಯಕರಾದ ವೀರೇಂದ್ರ ರಾಣಾ ಮತ್ತು ಕನ್ವರ್ ಸಿಂಗ್ ರಾಣಾ ಅವರನ್ನು ಹೆಸರಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಳೆದ ವರ್ಷ ಫೆಬ್ರವರಿಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಿಕ್ ಮತ್ತು ಇತರರ ನಿವಾಸಗಳಲ್ಲಿ ಸಿಬಿಐ ಶೋಧ ನಡೆಸಿತ್ತು. 2019 ರಲ್ಲಿ ಕಿರು ಹೈಡ್ರೊ ಎಲೆಕ್ಟ್ರಿಕ್ ಪವರ್ (ಎಚ್‌ಇಪಿ) ಯೋಜನೆಯ ಸುಮಾರು 2,200 ಕೋಟಿ ರೂ. ಮೌಲ್ಯದ ಸಿವಿಲ್ ಕಾಮಗಾರಿಗಳ ಒಪ್ಪಂದವನ್ನು ಖಾಸಗಿ ಕಂಪನಿಗೆ ನೀಡುವಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳಿಗೆ ಈ ಪ್ರಕರಣ ಸಂಬಂಧಿಸಿದೆ ಎಂದು 2022 ರಲ್ಲಿ ಎಫ್‌ಐಆರ್ ದಾಖಲಾದ ನಂತರ ಸಿಬಿಐ ಹೇಳಿತ್ತು.
ಸಿಬಿಐ ಚಾರ್ಜ್‌ಶೀಟ್ ಸಲ್ಲಿಕೆ ಬೆನ್ನಲ್ಲೇ ಮಲಿಕ್ ಅವರ ಎಕ್ಸ್ ಖಾತೆಯಿಂದ ಪೋಸ್ಟ್‌ವೊಂದು ಬಂದಿದೆ. ‘ನನ್ನ ಅನೇಕ ಹಿತೈಷಿಗಳಿಂದ ನನಗೆ ಕರೆಗಳು ಬರುತ್ತಿವೆ. ಆದರೆ ನಾನು ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ. ನನ್ನ ಸ್ಥಿತಿ ಈಗ ತುಂಬಾ ಕೆಟ್ಟದಾಗಿದೆ. ನಾನು ಯಾರೊಂದಿಗೂ ಮಾತನಾಡುವ ಸ್ಥಿತಿಯಲ್ಲಿಲ್ಲ. ನಾನು ಮೇ 11 ರಿಂದ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ದಾಖಲಾಗಿದ್ದೇನೆ. ಸೋಂಕಿನ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಈಗ ಸ್ಥಿತಿ ತುಂಬಾ ಗಂಭೀರವಾಗಿದ್ದು, ಕಳೆದ ಮೂರು ದಿನಗಳಿಂದ ಮೂತ್ರಪಿಂಡದ ಡಯಾಲಿಸಿಸ್‌ಗೆ ಒಳಗಾಗುತ್ತಿದ್ದೇನೆಂದು’ ಮಾಡಲಾಗಿದೆ.