ಹೊಸದಿಗಂತ ವರದಿ, ಹಾಸನ:
ಹಾಸನ ಜಿಲ್ಲೆಯಲ್ಲಿ ನಿರಂತರ ಬಿರುಗಾಳಿ ಮಳೆಯಿಂದ ಸಾಲು ಸಾಲು ಅವಾಂತರಗಳು ಸೃಷ್ಟಿಯಾಗಿವೆ. ಬೆಂಗಳೂರು – ಮಂಗಳೂರು ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75 ಶಿರಾಡಿ ಘಾಟ್ ರಸ್ತೆಯಲ್ಲಿ ಇದೀಗ ಎರಡು ಕಡೆ ಭೂ ಕುಸಿತ ಉಂಟಾಗಿದೆ
ಕಳೆದ ನಾಲ್ಕು ದಿನಗಳಿಂದ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಜೋರಾಗಿದೆ. ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಪರಿಣಾಮ ಸಕಲೇಶಪುರ ತಾಲೂಕಿನ ದೋಣಿಗಾಲ್ ಮತ್ತು ಅಡ್ಡನಗುಡ್ಡದ ಬಳಿ ಶಿರಾಡಿ ಘಾಟ್ ರಸ್ತೆಯಲ್ಲಿ ಎರಡು ಕಡೆ ಭೂ ಕುಸಿತ ಉಂಟಾಗಿದೆ. ವಾಹನ ಸವಾರರಲ್ಲಿ ಆತಂಕ ಶುರುವಾಗಿದೆ.
ತಡೆಗೋಡೆ ನಿರ್ಮಿಸಿದ್ದರು ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಮಣ್ಣು ಕುಸಿಯುತ್ತಿದೆ. ಹೀಗಾಗಿ ಮರಗಳು ನೆಲಕ್ಕೆ ಉರುಳುತ್ತಿದ್ದು, ಅಪಾರ ಮೌಲ್ಯದ ಕಾಫಿ ಬೆಳೆ ನಾಶವಾಗಿದೆ. ಇನ್ನು ವೀಕೆಂಡ್ ಹಿನ್ನೆಲೆ ಶಿರಾಡಿಘಾಟ್ ರಸ್ತೆಯಲ್ಲಿ ವಾಹನ ಸಂಚಾರ ಹೆಚ್ಚಳವಾಗಿದೆ. ಆದರೆ ಭೂ ಕುಸಿತದಿಂದ ವಾಹನ ಸವಾರರು ಎಚ್ಚರಿಕೆಯಿಂದ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಅವೈಜ್ಞಾನಿಕ ಕಾಮಗಾರಿಯಿಂದ ರಾಷ್ಟ್ರೀಯ ಹೆದ್ದಾರಿ 75 ಮಣ್ಣು ಕುಸಿತ : ಅವೈಜ್ಞಾನಿಕ ಕಾಮಗಾರಿಯಿಂದಾಗಿ ರಾಷ್ಟ್ರೀಯ ಹೆದ್ದಾರಿ 75 ನಿರಂತರ ರಸ್ತೆ ಸಮಸ್ಯೆ ಆಗುತ್ತಿದೆ. ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್, ಮಣ್ಣು
ಕುಸಿತ, ಅಪಘಾತ ಹೀಗೆ ರಸ್ತೆಯ ಅವೈಜ್ಞಾನಿಕ ಕಾಮಗಾರಿಯ ಇಷ್ಟೆಲ್ಲಾ ಅವಂತಾರಕ್ಕೆ ಕಾರಣ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ
ಡಿವೈಎಸ್ಪಿ ಪ್ರಮೋದ್ ಜೈನ್ ಹಾಗೂ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಸಂಚಾರ ಸುಗಮಗೊಳಿಸಲು ಯತ್ನಿಸುತ್ತಿದ್ದಾರೆ. ಜನಜೀವನ ಅಸ್ತವ್ಯಸ್ತ: ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಜನಜೀವನ ಸಂಪೂರ್ಣ ಕ್ಷೀಣಿಸಿದೆ. ಮಳೆಯ ತೀವ್ರತೆಯಿಂದಾಗಿ ಸ್ಥಳೀಯ ಆಡಳಿತ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುತ್ತಿದ್ದು, ರೈತರಿಗೆ ಪರಿಹಾರ ಮತ್ತು ಸಂತ್ರಸ್ತರಿಗೆ ಸಹಾಯದ ವಿಷಯದಲ್ಲಿ ತುರ್ತು ಕ್ರಮಕ್ಕೆ ಮುಂದಾಗಿದೆ.
60 ಎಕರೆ ಜಮೀನಿಗೆ ನುಗ್ಗಿದ ಕೆರೆ ನೀರು
ಇನ್ನು ವರುಣನ ಅಬ್ಬರಕ್ಕೆ ಕೆರೆ ಕೋಡಿ ಒಡೆದು ರೈತರ ಜಮೀನುಗಳಿಗೆ ನೀರು ನುಗ್ಗಿರುವ ಘಟನೆ ಬೇಲೂರು ತಾಲ್ಲೂಕಿನ ಕುಪ್ಪಗೋಡು ಗ್ರಾಮದಲ್ಲಿ ನಡೆದಿದೆ. ಗದ್ದೆ, ತೆಂಗಿನ ತೋಟಗಳಿಗೆ ನೀರು ನುಗ್ಗಿದ್ದು, ಅಪಾರ ಪ್ರಮಾಣ ಬೆಳೆ ಹಾನಿ ಆಗಿದೆ. ಅಂದಾಜು 60 ಎಕರೆ ಜಮೀನಿಗೆ ಕೆರೆ ನೀರು ನುಗ್ಗಿದ್ದು, ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತ ಉಂಟಾಗಿದೆ.