ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕೊಡಗು ಜಿಲ್ಲೆಯಾದ್ಯಂತ ಇರುವ ಜಲಪಾತಗಳು, ಝರಿ, ನದಿ, ತೊರೆ, ಸಾರ್ವಜನಿಕ ಕೆರೆಗಳು, ಅಣೆಕಟ್ಟು, ಜಲಾಶಯದ ಪ್ರದೇಶಗಳಲ್ಲಿ ಸಾರ್ವಜನಿಕರು, ಪ್ರವಾಸಿಗರು ಅನಧಿಕೃತವಾಗಿ ನೀರಿನಲ್ಲಿ ಇಳಿಯುವುದು, ಮುಳುಗು ಹೊಡೆಯುವುದು, ಸಾಹಸ ಚಟುವಟಿಕೆ ನಡೆಸುವುದು, ಈಜುವುದನ್ನು ಮುಂದಿನ ಆದೇಶದವರೆಗೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶ ಹೊರಡಿಸಿದ್ದಾರೆ.
ಈ ಆದೇಶದ ಉಲ್ಲಂಘನೆಯು ವಿಪತ್ತು ನಿರ್ವಹಣಾ ಕಾಯ್ದೆ, 2005 ಸೆಕ್ಷನ್ 51(ಬಿ) ಮತ್ತು ಸಂಬಂಧಿತ ನಿಯಮ, ಕಾಯ್ದೆಗಳ ವಿವಿಧ ಕಲಂಗಳಡಿಯಲ್ಲಿ ದಂಡನೀಯವಾಗಿದೆ ಎಂದು ಅವರು ಎಚ್ಚರಿಸಿದ್ದಾರೆ.
ಭಾರೀ ವಾಹನ ನಿರ್ಬಂಧ
ಕೊಡಗು ಜಿಲ್ಲೆಯಲ್ಲಿ ಕಳೆದ 4-5 ವರ್ಷಗಳ ಭಾರೀ ಮಳೆಯಿಂದ ಹಲವು ಭಾಗಗಳಲ್ಲಿ ಭೂಕುಸಿತವಾಗಿದ್ದು, ಜೀವಹಾನಿಯೊಂದಿಗೆ ಭಾರೀ ಪ್ರಮಾಣದಲ್ಲಿ ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಹಾನಿಯಾಗಿದೆ. ಕೊಡಗು ಜಿಲ್ಲೆಯ ರಸ್ತೆಗಳು ಭಾರೀ ತಿರುವುಗಳು ಹಾಗೂ ಏರಿಳಿತದಿಂದ ಕೂಡಿರುತ್ತದೆ. ಪ್ರಸ್ತುತ ಮುಂಗಾರು ಪ್ರಾರಂಭವಾಗಿದ್ದು, ಮಳೆಯ ಪ್ರಮಾಣ ಹೆಚ್ಚಿದಂತೆ ನೆಲದಲ್ಲಿ ತೇವಾಂಶ ಹೆಚ್ಚಾಗಿ, ಅಧಿಕ ಭಾರದ ವಾಹನಗಳು ಸಂಚರಿಸಿದಲ್ಲಿ ಭೂಕುಸಿತ ಉಂಟಾಗಿ ಅನಾಹುತಗಳಾಗುವ ಸಾಧ್ಯತೆ ಹೆಚ್ಚಿದೆ.
ಆದ್ದರಿಂದ ಜಿಲ್ಲೆಯ ರಸ್ತೆಗಳು, ಸಾರ್ವಜನಿಕ ಆಸ್ತಿ-ಪಾಸ್ತಿಗಳ ರಕ್ಷಣೆ ಹಾಗೂ ಪ್ರಯಾಣಿಕರ ಮತ್ತು ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ ಕೊಡಗು ಜಿಲ್ಲೆಯಾದ್ಯಂತ ಜೂ.6 ರಿಂದ ಜು.5 ರವರೆಗೆ ಭಾರೀ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ.
ನಿರ್ಬಂಧಿತ ವಾಹನಗಳು
ಎಲ್ಲಾ ರೀತಿಯ ಮರದ ದಿಮ್ಮಿ ಮತ್ತು ಮರಳು ಸಾಗಾಣಿಕೆ ವಾಹನಗಳು, ವಾಹನದ ನೋಂದಣಿ ತೂಕ 18,500 ಕೆ.ಜಿ.ಗಿಂತ ಹೆಚ್ಚಿನ ಸರಕು ಸಾಗಾಣೆ ಮಾಡುವ ಸರಕು ಸಾಗಾಣಿಕೆ ವಾಹನಗಳು, ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್, ಶಿಪ್ ಕಾರ್ಗೋ ಕಂಟೈನರ್, ಲಾಂಗ್ ಚಾಸಿಸ್ (ಮಲ್ಟಿ ಆಕ್ಸಿಲ್) ವಾಹನಗಳು.
ನಿರ್ಬಂಧದಿಂದ ವಿನಾಯಿತಿ ನೀಡಿದ ವಾಹನಗಳು: ಅಡುಗೆ ಅನಿಲ ಮತ್ತು ಇಂಧನ ಪೂರೈಕೆ ವಾಹನಗಳು, ಹಾಲು ಪೂರೈಕೆ ವಾಹನಗಳು, ಸರ್ಕಾರಿ ಕೆಲಸದ ನಿಮಿತ್ತ ಉಪಯೋಗಿಸಲ್ಪಡುವ ವಾಹನಗಳು, ಶಾಲಾ ಕಾಲೇಜು ಮತ್ತು ಸಾರ್ವಜನಿಕ ಪ್ರಯಾಣಿಕರ ವಾಹನಗಳು(ಮಲ್ಟಿ ಆಕ್ಸಿಲ್ ಬಸ್ಗಳು ಸೇರಿದಂತೆ).
ಕೊಡಗು ಜಿಲ್ಲೆಯ ಮುಖಾಂತರ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 275ರ ಜಿಲ್ಲೆಯ ಗಡಿಭಾಗಗಳಾದ ಕುಶಾಲನಗರ ಮತ್ತು ಸಂಪಾಜೆಯಲ್ಲಿ ವ್ಯವಸ್ಥಿತ ಚೆಕ್ಪೋಸ್ಟ್ ನಿರ್ಮಿಸಿ, ದಿನದ 24 ಗಂಟೆಯೂ ನಿಗಾ ವಹಿಸಲು ಸಿಬ್ಬಂದಿಗಳನ್ನು ನಿಯೋಜಿಸಲು, ಮೊಬೈಲ್ ಪ್ಯಾಟ್ರೋಲಿಂಗ್ ನಡೆಸಲು ಹಾಗೂ ಈ ಆದೇಶ ಉಲ್ಲಂಘನೆಯಾಗದಂತೆ ಮತ್ತು ಆದೇಶ ಉಲ್ಲಂಘಿಸಿದವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲು ಆರಕ್ಷಕರ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಅವರು ಸೂಚಿಸಿದ್ದಾರೆ.