ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ ಭಟ್ಕಳ ತಾಲೂಕುಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಗಾಳಿ ಸಹಿತ ಸುರಿಯುತ್ತಿರುವ ಮಳೆಯಿಂದ ಜಿಲ್ಲೆಯ ಮಲೆನಾಡು ಭಾಗದ ಕೆಲವೆಡೆ ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು ವಿದ್ಯುತ್ ಸಮಸ್ಯೆ ಉಂಟಾಗಿದೆ.
ನಾಳೆ ಮತ್ತು ನಾಡಿದ್ದು ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಕಳೆದ ರಾತ್ರಿಯಿಂದ ಸುರಿದ ಬಾರಿ ಮಳೆಯಿಂದಾಗಿ ಇಡೀ ಹುಬ್ಬಳ್ಳಿ ಕೆರೆಯಂತಾಗಿದೆ. ರಸ್ತೆಗಳೆಲ್ಲಾ ಮುಳುಗಿ ನದಿಯಂತೆ ನೀರು ಹರಿಯುತ್ತಿದೆ. ಇದರಿಂದ ಜನರ ಜೀವನ ಅಸ್ತವ್ಯಸ್ತವಾಗಿದೆ. ದಾವಣಗೆರೆ ಜಿಲ್ಲಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಜನಜೀವನ ಬಾಧಿತ ಗೊಂಡಿದೆ. ಗದಗ ಜಿಲ್ಲೆಯ ಬೆಣ್ಣೆಹಳ್ಳದ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಯಾವಗಲ್ ಗ್ರಾಮದ ರೈತರು ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ಈರುಳ್ಳಿ, ಶೇಂಗಾ, ಹೆಸರು ಮತ್ತು ಮೆಣಸಿನಕಾಯಿ ಬೆಳೆಗಳು ಜಲಾವೃತಗೊಂಡಿವೆ.