ಆರ್‌ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ: ದಾಖಲೆ ಸ್ವೀಕರಿಸಿದ ಹೈಕೋರ್ಟ್, ಜೂ.17ಕ್ಕೆ ವಿಚಾರಣೆ ಮುಂದೂಡಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆರ್‌ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ಪ್ರಕರಣ ಕುರಿತ ಎಲ್ಲ ರೀತಿಯ ಸಂವಹನ ದಾಖಲೆಗಳನ್ನು ಮುಖ್ಯ ಕಾರ್ಯದರ್ಶಿಗಳ ವಶದಲ್ಲಿಡುವಂತೆ ಹೈಕೋರ್ಟ್ ಇಂದು ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಘಟನೆಗೆ ಸಂಬಂಧಿಸಿದಂತೆ ಮಾಧ್ಯಮಗಳ ವರದಿಯನ್ನು ಆಧರಿಸಿ ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್‌ ಮತ್ತು ನ್ಯಾಯಮೂರ್ತಿ ಸಿ.ಎಂ ಜೋಶಿ ಅವರಿದ್ದ ವಿಭಾಗೀಯ ಪೀಠ ಇಂದು ಸಹ ವಿಚಾರಣೆ ನಡೆಸಿ, ಸರ್ಕಾರಕ್ಕೆ ಹಲವು ಸೂಚನೆಗಳನ್ನು ನೀಡಿದೆ.

ವಿಚಾರಣೆ ಸಂದರ್ಭದಲ್ಲಿ ಸರ್ಕಾರದ ಪರ ಹಾಜರಿದ್ದ ಅಡ್ವೋಕೇಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ, ಘಟನೆಗೆ ಸಂಬಂಧಿಸಿದಂತೆ ಈವರೆಗೂ ನಡೆದ ತನಿಖೆಗೆ ಸಂಬಂಧಿಸಿದ ವಸ್ತುಸ್ಥಿತಿ ವರದಿ ಮತ್ತು ಕೈಗೊಂಡ ಕ್ರಮಕ್ಕೆ ಸಂಬಂಧಿಸಿದಂತೆ ಮುಚ್ಚಿದ ಲಕೋಟೆಯಲ್ಲಿ ವಿವರಗಳನ್ನು ಪೀಠಕ್ಕೆ ಸಲ್ಲಿಸಿದರು. ಈ ಹಿಂದೆ 9 ಪ್ರಶ್ನೆಗಳನ್ನು ಕೇಳಿ ಉತ್ತರಿಸುವಂತೆ ಸೂಚನೆ ನೀಡಿತ್ತು. ಅದಕ್ಕೆ ಸಂಬಂಧಿಸಿದಂತೆ ಸರ್ಕಾರ ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್ ಗೆ ವಿವರಣೆ ನೀಡಿದೆ.

ಘಟನೆ ಸಂಬಂಧ ಸರ್ಕಾರ ಜಿಲ್ಲಾಧಿಕಾರಿಗಳ ಹಾಗೂ ನ್ಯಾಯಾಂಗ ತನಿಖೆಗೆ ವಹಿಸಿದೆ. ಈ ಎರಡು ತನಿಖೆಗಳಲ್ಲಿ ವಿಭಿನ್ನ ಅಭಿಪ್ರಾಯಗಳು ಬಂದರೆ ಯಾವ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ ಎಂದು ಹೈಕೋರ್ಟ್ ಪ್ರಶ್ನಿಸಿತು. ಈ ಮಧ್ಯೆ ಇದೇ 17ಕ್ಕೆ ವಿಚಾರಣೆಯನ್ನು ಕೈಗೆತ್ತಿಕೊಳ್ಳುವುದಾಗಿ ಪೀಠವು ತಿಳಿಸಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!