ಹೊಸದಿಗಂತ ಡಿಜಿಟಲ್ ಡೆಸ್ಕ್:
ಐತಿಹಾಸಿಕ ನಂದಿಗಿರಿಧಾಮದಲ್ಲಿ ಗುರುವಾರ ನಿಗದಿಯಾಗಿದ್ದ ಸಚಿವ ಸಂಪುಟ ಸಭೆಯನ್ನು ಬುಧವಾರ ದಿಢೀರ್ ರದ್ದು ಮಾಡಲಾಗಿದ್ದು, ನಾಳೆ ವಿಧಾನಸೌಧದಲ್ಲೇ ಸಚಿವ ಸಂಪುಟ ಸಭೆ ನಡೆಸಲು ನಿರ್ಧರಿಸಲಾಗಿದೆ.
ಈ ಕುರಿತು ರಾಜ್ಯ ಸರಕಾರ ಇಂದು ಅಧಿಕೃತ ಪ್ರಕಟಣೆ ಹೊರಡಿಸಿದ್ದು, ದಿನಾಂಕ 19-06-2025 ರಂದು ಗುರುವಾರ ಮಧ್ಯಾಹ್ನ 12 ಗಂಟೆಗೆ ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದಲ್ಲಿ ನಡೆಸಲು ಉದ್ದೇಶಿಸಲಾಗಿದ್ದ ಸಚಿವ ಸಂಪುಟ ಸಭೆಯನ್ನು ಬೆಂಗಳೂರಿನ ವಿಧಾನಸೌಧದ ಸಚಿವ ಸಂಪುಟ ಸಭಾ ಮಂದಿರಕ್ಕೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದೆ. ಆದರೆ ಸ್ಥಳಾಂತರಕ್ಕೆ ಯಾವುದೇ ಕಾರಣ ನೀಡಿಲ್ಲ.
ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿತ್ತು. ಅಲ್ಲದೆ ಇಂದಿನಿಂದ ಎರಡು ದಿನಗಳ ಕಾಲ ನಂದಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ ಸಹ ವಿಧಿಸಿತ್ತು.