ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ನಡೆದ ಸಭೆಯಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಭಾಗಿಯಾದರು.
ಸಂಸದ ಶ್ರೇಯಸ್ ಪಟೇಲ್ , ಶಾಸಕರಾದ ಸುರೇಶ್, ಬಾಲಕೃಷ್ಣ, ಸಿಮೆಂಟ್ ಮಂಜು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ರೈಲ್ವೆ ಹಾಗೂ ವಿದ್ಯುತ್ ಇಲಾಖೆ ಅಧಿಕಾರಿಗಳೊಂದಿಗೆ ಮಹತ್ವದ ವಿಷಯಗಳ ಕುರಿತು ಚರ್ಚಿಸಿದ ಅವರು, ಬೆಂಗಳೂರು ಹಾಗೂ ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸಂಚಾರಕ್ಕೆ ಅನುಕೂಲವಾಗುವಂತೆ ಹಾಸನದಿಂದ ಮಂಗಳೂರಿನ ಪಡೀಲ್ ನಿಲ್ದಾಣವರೆಗೆ ರೈಲ್ವೆ ಮಾರ್ಗ ವಿದ್ಯುದ್ಧೀಕರಣ ಯೋಜನೆ ಕೈಗೊಳ್ಳುವ ಕುರಿತು ಸಮಾಲೋಚನೆ ನಡೆಸಿದರು.
ಹಾಸನ- ಬೀರೂರು ಜೋಡಿ ರೈಲು ಮಾರ್ಗ ನಿರ್ಮಾಣಕ್ಕೆ ಸಂಬಂಧಿಸಿದಂತೆ 503 ಎಕರೆ ಭೂ ಸ್ವಾಧೀನ ಪ್ರಕ್ರಿಯೆ ನೆನೆಗುದಿಗೆ ಬಿದ್ದಿದ್ದು, ಸಂಬಂಧಪಟ್ಟ ಅಧಿಕಾರಿಗಳು ಶೀಘ್ರದಲ್ಲೇ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಆದೇಶಿಸಿದರು. ಈ ಕಾರ್ಯ ಚುರುಕುಗೊಂಡರೆ ಮುಂದಿನ ಎರಡ್ಮೂರು ವರ್ಷದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.