ಹೊಸದಿಗಂತ ಡಿಜಿಟಲ್ ಡೆಸ್ಕ್:
ಐದು ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭೇಟಿಯ ನಾಲ್ಕನೇ ಭಾಗವಾಗಿ ಇಂದು ಬ್ರೆಜಿಲ್‌ಗೆ ಭೇಟಿ ನೀಡಿದ್ದಾರೆ.
ಬ್ರೆಜಿಲ್‌ನ ರಿಯೊ ಡಿ ಜೆನೆರಿಯೊದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಇಂದು ನಡೆಯಲಿರುವ 17ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಈ ಶೃಂಗಸಭೆಯಲ್ಲಿ ಇವರು ಜಾಗತಿಕ ಆಡಳಿತ ಸುಧಾರಣೆ, ಶಾಂತಿ ಹಾಗೂ ಭದ್ರತೆ, ಬಹುಪಕ್ಷೀಯತೆಯನ್ನು ಬಲಪಡಿಸುವುದು, ಕೃತಕ ಬುದ್ಧಿಮತ್ತೆಯ ಜವಾಬ್ದಾರಿಯುತ ಬಳಕೆ, ಜಾಗತಿಕ ಆರೋಗ್ಯ ಸೇರಿದಂತೆ ಪ್ರಮುಖ ವಿಷಯಗಳ ಕುರಿತು ಅಭಿಪ್ರಾಯಗಳ ವಿನಿಮಯ ಮಾಡಿಕೊಳ್ಳಲಿದ್ದಾರೆ.
ಸಭೆಯಲ್ಲಿ ಬೊಲಿವಿಯಾ, ಕ್ಯೂಬಾ, ಕಝಾಕಿಸ್ತಾನ್, ಉಜ್ಬೇಕಿಸ್ತಾನ್ ಮಲೇಷ್ಯಾ ಮತ್ತು ವಿಯೆಟ್ನಾಂ ಸೇರಿದಂತೆ ಹತ್ತು ಪಾಲುದಾರ ರಾಷ್ಟ್ರಗಳು ಭಾಗವಹಿಸಲಿವೆ. ಇದರ ಜೊತೆಗೆ ಬ್ರೆಜಿಲ್‌ನೊಂದಿಗೆ ಹಲವಾರು ದ್ವಿಪಕ್ಷೀಯ ಸಭೆಗಳನ್ನು ಕೂಡಾ ನಡೆಸುವ ನಿರೀಕ್ಷೆಗಳಿವೆ. ಬ್ರೆಜಿಲಿಯಾಕ್ಕೆ ಸುಮಾರು ಆರು ದಶಕಗಳಲ್ಲಿ ಭಾರತೀಯ ಪ್ರಧಾನಿಯೊಬ್ಬರ ಮೊದಲ ಭೇಟಿ ಇದಾಗಿದೆ. ಅಲ್ಲದೇ ನರೇಂದ್ರ ಮೋದಿ ಅವರು ಬ್ರೆಸಿಲಿಯಾಕ್ಕೂ ಭೇಟಿ ನೀಡಿ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರೊಂದಿಗೆ ದ್ವಿಪಕ್ಷೀಯ ಚರ್ಚೆಗಳನ್ನು ನಡೆಸಲಿದ್ದಾರೆ. ಈ ಚರ್ಚೆಯಲ್ಲಿ ವ್ಯಾಪಾರ, ರಕ್ಷಣೆ, ಇಂಧನ, ಬಾಹ್ಯಾಕಾಶ, ತಂತ್ರಜ್ಞಾನ, ಕೃಷಿ, ಆರೋಗ್ಯ ಸೇರಿದಂತೆ ಪರಸ್ಪರ ಆಸಕ್ತಿಯ ಕ್ಷೇತ್ರಗಳಲ್ಲಿ ಎರಡೂ ದೇಶಗಳ ನಡುವಣ ಕಾರ್ಯತಂತ್ರದ ಪಾಲುದಾರಿಕೆಯನ್ನು ವಿಸ್ತರಿಸುವ ಕುರಿತು ಮಾತುಕತೆ ನಡೆಯಲಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ