ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಇತ್ತೀಚೆಗೆ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಸಂಖ್ಯೆ ಹೆಚ್ಚಾಗಿರುವುದು ಆತಂಕಕಾರಿ ಸಂಗತಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹುಬ್ಬಳ್ಳಿಯಲ್ಲಿಂದು ಹೇಳಿದ್ದಾರೆ.
ಕೋವಿಡ್ ಲಸಿಕೆಯಿಂದ ಹೃದಯಾಘಾತ ಸಂಭವಿಸುತ್ತಿದೆ ಎನ್ನುವ ಹೇಳಿಕೆ, ವಿಜ್ಞಾನಿಗಳು, ಔಷಧ ತಯಾರಕರು ಹಾಗೂ ದೇಶಕ್ಕೆ ಮಾಡಿದ ಅಪಮಾನ. ಹೃದಯಘಾತದಿಂದ ಸಾವು ಸಂಭವಿಸುವುದಕ್ಕೂ, ಕೋವಿಡ್ ಲಸಿಕೆಗೂ ಯಾವುದೇ ಸಂಬಂಧ ಇಲ್ಲ ಎಂದು ರಾಜ್ಯ ಸರ್ಕಾರ ನೇಮಕ ಮಾಡಿದ ತಜ್ಞರ ಸಮಿತಿಯೇ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ಷಮೆ ಕೋರಬೇಕು ಎಂದು ಹೇಳಿದರು. ಕಾಂಗ್ರೆಸ್ ನಾಯಕರು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇಜವಾಬ್ದಾರಿ ಹೇಳಿಕೆ ನೀಡುವುದು ಅತ್ಯಂತ ಖಂಡನಾರ್ಹ. ಕೋವಿಡ್ ಲಸಿಕೆ ಅಸಂಖ್ಯಾತ ಜನರ ಪ್ರಾಣ ಉಳಿಸಲು ಸಹಕಾರಿಯಾಗಿದೆ. ಜೊತೆಗೆ ವಿದೇಶಗಳಿಗೂ ದೇಶದಲ್ಲಿ ಅಭಿವೃದ್ಧಿಪಡಿಸಿದ ಲಸಿಕೆಯನ್ನು ಪೂರೈಕೆ ಮಾಡಲಾಗಿದೆ ಎಂದು ಅವರು ಹೇಳಿದರು. ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಹಣ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಖಾತರಿ ಯೋಜನೆಗಳನ್ನು ನಿಲ್ಲಿಸಿ ಅಭಿವೃದ್ಧಿ ಯೋಜನೆಗಳನ್ನು ಕೈಗೆತ್ತಿಕೊಳ್ಳಬೇಕಾಗುತ್ತದೆ ಎನ್ನುವ ಕಾಂಗ್ರೆಸ್ ನಾಯಕರ ಹೇಳಿಕೆ ರಾಜ್ಯ ಸರ್ಕಾರದ ವಾಸ್ತವಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ತಿಳಿಸಿದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ