ವಿರೋಧ ಪಕ್ಷದ ನಾಯಕರನ್ನು ವಿಶ್ವಾಸಕ್ಕೆ ಪಡೆದು ಗ್ರೇಟರ್ ಬೆಂಗಳೂರು ಪ್ರಾಧಿಕಾರ ವರದಿ ಪ್ರಸ್ತಾಪ: ಡಿಕೆಶಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿರೋಧ ಪಕ್ಷದ ನಾಯಕರನ್ನು ವಿಶ್ವಾಸಕ್ಕೆ ಪಡೆದ ನಂತರ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವರದಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಪಾಲಿಕೆಗಳನ್ನು ಹೇಗೆ ವಿಂಗಡಿಸಬೇಕು ಎಂಬುದರ ಬಗ್ಗೆ ಸಮಿತಿಯವರು ಅಂತಿಮ ವರದಿ ನೀಡಿದ್ದಾರೆ. ಈ ವಿಚಾರವಾಗಿ ವಿರೋಧ ಪಕ್ಷದ ನಾಯಕರ ಜೊತೆ ಚರ್ಚೆ ಮಾಡಿ ಅವರನ್ನು ವಿಶ್ವಾಸಕ್ಕೆ ಪಡೆಯಬೇಕು ಎಂದು ಸಮಿತಿ ಅಧ್ಯಕ್ಷರಿಗೆ ಸೂಚಿಸಲಾಗಿದೆ. ಇದಾದ ಬಳಿಕ ಸಚಿವ ಸಂಪುಟ ಸಭೆಯ ಮುಂದೆ ವರದಿ ಬಗ್ಗೆ ಪ್ರಸ್ತಾಪ ಮಾಡಲಾಗುವುದು. ಈಗ ಹಾಲಿ ಇರುವ ಪಾಲಿಕೆ ವ್ಯಾಪ್ತಿಯಲ್ಲೇ ಇದನ್ನು ಜಾರಿಗೊಳಿಸುತ್ತೇವೆ. ಮುಂದಿನ ದಿನಗಳಲ್ಲಿ ಇದನ್ನು ವಿಸ್ತರಣೆ ಮಾಡಲಾಗುವುದು. ಸಚಿವ ಸಂಪುಟ ಸಭೆಯಲ್ಲಿ ಇದನ್ನು ಪ್ರಸ್ತಾಪಿಸಿ, ಆದಷ್ಟು ಬೇಗ ಚುನಾವಣೆ ನಡೆಸಬೇಕಿದೆ ಎಂದು ತಿಳಿಸಿದರು.

ಎತ್ತಿನಹೊಳೆ ಯೋಜನೆ ಸಂಬಂಧ ಸಚಿವ ಪರಮೇಶ್ವರ್ ಅವರ ಭೇಟಿ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಎತ್ತಿನಹೊಳೆ ವಿಚಾರವಾಗಿ ಕೆಲವು ಸಮಸ್ಯೆ ಇತ್ತು. ಅವರ ತಾಲೂಕನ್ನು ಕೈಬಿಡಬೇಕು ಎಂಬ ಪ್ರಸ್ತಾವನೆ ಇತ್ತು. ಈ ಭಾಗದಲ್ಲಿ ನೀರು ನಿಲ್ಲಿಸಬೇಕಾಗಿದ್ದು, ಯಾವುದೇ ಹಳ್ಳಿ ಮುಳುಗದಂತೆ ಈ ಯೋಜನೆ ಜಾರಿಗೆ ಮುಂದಾಗಿದ್ದೇವೆ. ಸ್ಥಳೀಯರೇ ಒಂದೆರಡು ಕೆರೆಗಳ ಬಗ್ಗೆ ಸಲಹೆ ನೀಡಿದ್ದು, ಎಲ್ಲರನ್ನು ವಿಶ್ವಾಸಕ್ಕೆ ಪಡೆದು, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪ ಮಾಡಲಾಗುವುದು ಎಂದು ತಿಳಿಸಿದರು. ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿದಂತೆ ತುಮಕೂರು ಹಾಗೂ ಹಾಸನ ಭಾಗದಲ್ಲಿ ಅರಣ್ಯ ಭೂಮಿಗೆ ಸಂಬಂಧಿಸಿದಂತೆ ಕೇಂದ್ರ ಸಚಿವರ ಅನುಮತಿ ಬಗ್ಗೆ ಚರ್ಚಿಸಲು ಸಮಯಾವಕಾಶ ನಿಗದಿಯಾಗಿದೆ. ಕೇಂದ್ರ ಜಲಶಕ್ತಿ ಸಚಿವರನ್ನೂ ಭೇಟಿ ಮಾಡಲಾಗುವುದು ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here