ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರು ಜಿಲ್ಲೆಯ ಕಾರಂಜಿ ಕೆರೆಯಲ್ಲಿರುವ ಮತ್ಸ್ಯಾಗಾರ ಬದಲಿಗೆ ಪೆಂಗ್ವಿನ್ ಪಾರ್ಕ್ ನಿರ್ಮಿಸಲು ಸರ್ಕಾರ ಮುಂದಾಗಿದ್ದು, ಜೊತೆಗೆ ಮೈಸೂರು ಮೃಗಾಲಯ, ಬನ್ನೇರುಘಟ್ಟ ಝೂ ಪ್ರವೇಶ ಶುಲ್ಕವನ್ನು ಶೇ.20ರಷ್ಟು ಹೆಚ್ಚಿಸಲು ನಿರ್ಧರಿಸಿದೆ.
ವಿಕಾಸಸೌಧದಲ್ಲಿಂದು ನಡೆದ ಕರ್ನಾಟಕ ಮೃಗಾಲಯ ಪ್ರಾಧಿಕಾರದ 159ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಈಶ್ವರ ಬಿ ಖಂಡ್ರೆ ಅವರು, ಮತ್ಸ್ಯಾಗಾರದ ಕಟ್ಟಡದಲ್ಲಿ ಪೆಂಗ್ವಿನ್ ಧಾಮ ಮಾಡುವುದು ಸೂಕ್ತವೆಂದು ತಜ್ಞರು ಅಭಿಪ್ರಾಯಪಟ್ಟಿರುವ ಹಿನ್ನೆಲೆಯಲ್ಲಿ ಕೂಡಲೇ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದರು.
ಮುಂದಿನ 5 ವರ್ಷಗಳಲ್ಲಿ ಆಯಾ ಮೃಗಾಲಯಗಳು ತಮ್ಮ ಖರ್ಚು, ವೆಚ್ಚವನ್ನು ತಾವೇ ನಿರ್ವಹಿಸಲು ಶಕ್ತವಾಗುವಂತೆ ಮತ್ತು ಆರ್ಥಿಕ ಸ್ವಾವಲಂಬನೆ ಸಾಧಿಸಲು ಅನುವಾಗುವಂತೆ ಯೋಜನೆ ರೂಪಿಸಲು ತಿಳಿಸಿದರು.