ಹೊಸದಿಗಂತ ವರದಿ ತುಮಕೂರು:
ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಗೂ ಪಾವಗಡ ತಾಲ್ಲೂಕು ಆಡಳಿತ ಮತ್ತು ತಾಲ್ಲೂಕು ಪಂಚಾಯತಿ ಸಹಯೋಗದಲ್ಲಿ ಇಂದು ಸೋಮವಾರ ಪಾವಗಡ ತಾಲ್ಲೂಕು ಕ್ರೀಡಾಂಗಣದಲ್ಲಿ “ತುಂಗಭದ್ರಾ ಜಲಾಶಯದ ಹಿನ್ನೀರಿನಿಂದ ಪಾವಗಡ ತಾಲ್ಲೂಕು ಹಾಗೂ ಪಟ್ಟಣ ವ್ಯಾಪ್ತಿಯ ಬಹುಗ್ರಾಮ ಕುಡಿಯುವ ನೀರಿನ ಸರಬರಾಜು ಯೋಜನೆ ಉದ್ಘಾಟನೆ, 2250 ಮೆಗಾವ್ಯಾಟ್ ಸೋಲಾರ್ ಪ್ಲಾಂಟ್ ನಿರ್ಮಾಣದ ಘೋಷಣೆ ಹಾಗೂ ಪಾವಗಡ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ 716 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಹಾಗೂ ವಿವಿಧ ಇಲಾಖೆಗಳ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು, ಸಲಕರಣೆ ವಿತರಣಾ ಕಾರ್ಯಕ್ರಮ”ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ.
ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ, ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವರು ಹಾಗೂ ಸಂಸದ ವಿ. ಸೋಮಣ್ಣ ಸೇರಿದಂತೆ ಸಚಿವರುಗಳಾದ ಕೆ.ಜೆ. ಜಾರ್ಜ್, ದಿನೇಶ್ ಗುಂಡೂರಾವ್, ಡಾ: ಹೆಚ್.ಸಿ. ಮಹದೇವಪ್ಪ, ಸತೀಶ್ ಜಾರಕಿಹೊಳಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಬಿ.ಝಡ್. ಜಮೀರ್ ಅಹ್ಮದ್ ಖಾನ್, ಈಶ್ವರ್ ಖಂಡ್ರೆ, ಎನ್. ಚಲುವರಾಯಸ್ವಾಮಿ, ಎಸ್.ಎಸ್. ಮಲ್ಲಿಕಾರ್ಜುನ, ರಹೀಂ ಖಾನ್, ಸಂತೋಷ್ ಎಸ್. ಲಾಡ್, ಕೆ.ವೆಂಕಟೇಶ್, ಶಿವರಾಜ್ ತಂಗಡಗಿ, ಡಿ. ಸುಧಾಕರ್, ಕೆ.ಎನ್.ರಾಜಣ್ಣ, ಮಧು ಬಂಗಾರಪ್ಪ, ಲಕ್ಷ್ಮಿ ಹೆಬ್ಬಾಳ್ಕರ್, ಡಾ: ಎಂ.ಸಿ. ಸುಧಾಕರ್ ಭಾಗವಹಿಸುವರು.
ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷರು ಹಾಗೂ ಪಾವಗಡ ವಿಧಾನ ಸಭಾ ಕ್ಷೇತ್ರದ ಶಾಸಕ ಹೆಚ್.ವಿ. ವೆಂಕಟೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಶಾಸಕರು, ಅಧಿಕಾರಿಗಳು, ಗಣ್ಯರು ಉಪಸ್ಥಿತರಿರುವರು.