ಸಮರ ನ್ಯಾಯಾಲಯದ ಹೊರಗೆ ನಡೆಯಲಿ: ತೇಜಸ್ವಿ ಸೂರ್ಯಗೆ ಸುಪ್ರೀಂ ಕೋರ್ಟ್ ರಿಲೀಫ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರೈತರೊಬ್ಬರ ಆತ್ಮಹತ್ಯೆ ಕುರಿತು ಸುಳ್ಳು ಸುದ್ದಿ ಹರಿಬಿಟ್ಟ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.

ಪ್ರಕರಣವನ್ನು ರಾಜಕೀಯಗೊಳಿಸಬಾರದು ಎಂದು ತಿಳಿಸಿರುವ ಸಿಜೆಐ ಬಿಆರ್ ಗವಾಯಿ , ಇಂತಹ ಸಮರ ನ್ಯಾಯಾಲಯದ ಹೊರಗೆ ನಡೆಯಲಿ ಎಂದು ಆಕ್ಷೇಪ ಹೊರ ಹಾಕಿದರು. ಬಳಿಕ ಅರ್ಜಿ ವಜಾ ಮಾಡಿದರು.

ಬಿಜೆಪಿ ಸಂಸದರಾಗಿರುವ ತೇಜಸ್ವಿ ಸೂರ್ಯ ಅವರು, 2024ರ ನವೆಂಬರ್ 7ರಂದು ರೈತನ ಆತ್ಮಹತ್ಯೆಗೆ ಸಂಬಂಧಿಸಿದಂತೆ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದರು. ಅದರಲ್ಲಿ ತಮ್ಮ ಜಮೀನಿನ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿದ್ದರಿಂದ ಮನನೊಂದು ಹಾವೇರಿ ಜಿಲ್ಲೆಯ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದಿದ್ದರು. ರೈತನ ಆತ್ಮಹತ್ಯೆ ಬಗ್ಗೆ ತೇಜಸ್ವಿ ಸೂರ್ಯ ಅವರು ನಕಲಿ ಸುದ್ದಿಗಳನ್ನು ಪ್ರಸಾರ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಇಂತಹ ಯಾವುದೇ ಪ್ರಕರಣ ನಡೆದಿಲ್ಲ ಎಂದು ಎಸ್‌ಪಿ ಸ್ಪಷ್ಟನೆ ನೀಡಿದ ಬಳಿಕ ಪೋಸ್ಟ್ ಅನ್ನು ಡಿಲೀಟ್ ಮಾಡಿದ್ದರು. ಸುಳ್ಳು ಸುದ್ದಿ ಹರಡಿದ್ದಕ್ಕಾಗಿ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸೆನ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.

ಪ್ರಕರಣ ರದ್ದು ಕೋರಿ ಸಂಸದ ತೇಜಸ್ವಿ ಸೂರ್ಯ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ಬಳಿಕ ಹೈಕೋರ್ಟ್ ಪ್ರಕರಣವನ್ನು ರದ್ದು ಮಾಡಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನೆ ಮಾಡಿ ಹಾವೇರಿಯ ಸಿಇಎನ್ ಪೊಲೀಸ್ ತನಿಖಾಧಿಕಾರಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!