ಯೂರಿಯಾ ಗೊಬ್ಬರ ಅವ್ಯವಸ್ಥೆ ಖಂಡಿಸಿ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಪ್ರತಿಭಟನೆ

ಹೊಸದಿಗಂತ ಚಿತ್ರದುರ್ಗ 

ರೈತರಿಗೆ ಸಮರ್ಪಕವಾಗಿ ಯೂರಿಯಾ ಗೊಬ್ಬರ ಪೂರೈಸದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಜಿಲ್ಲಾ ರೈತ ಮೋರ್ಚಾ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು. ನಗರದ ನೀಲಕಂಠೇಶ್ವರ ದೇವಾಲಯದಿಂದ ಹೊರಟ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಆವರಣದ ಮುಖ್ಯದ್ವಾರದ ಬಳಿ ಬಹಿರಂಗ ಸಭೆ ನಡೆಸಲಾಯಿತು. ಬಳಿಕ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ನುಗ್ಗಲು ಯತ್ನಿಸಿದರು. ಪೊಲೀಸರು ಪ್ರತಿಭಟನಾಕಾರರನ್ನು ತಡೆದು ನಿಲ್ಲಿಸಿದರು. ನಂತರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ಇದೆಲ್ಲ ಮುಗಿದ ಮೇಲೆ ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಡಾ.ನವೀನ್ ಹಾಗೂ ರೈತ ಮೋರ್ಚಾ ಜಿಲ್ಲಾಧ್ಯಕ್ಷ ವೆಂಕಟೇಶ್ ಯಾದವ್ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ನುಗ್ಗುವ ಪ್ರಯತ್ನ ಮಾಡಿದರು. ಪೊಲೀಸರು ತಡೆಯೊಡ್ಡಿದರು. ಆದರೂ ಪಟ್ಟು ಬಿಡದ ಅವರು ಆವರಣದೊಳಗೆ ನುಗ್ಗಿದರು.

ಅದರಂತೆ ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ಮಲ್ಲಿಕಾರ್ಜನ್, ಮಹಿಳಾ ಕಾರ್ಯಕರ್ತೆ ರೇಖಾ ಪೊಲೀಸರ ಬಿಗಿ ಭದ್ರತೆಯನ್ನು ಲೆಕ್ಕಿಸದೆ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ನುಗ್ಗಿದರು. ಇವರ ಹಿಂದೆಯೇ ನೂರಾರು ಸಂಖ್ಯೆಯ ಬಿಜೆಪಿ ಕಾರ್ಯಕರ್ತರು ಆವರಣದೊಳಗೆ ಪ್ರವೇಶಿಸಿದರು. ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಹಾಗೂ ಕೃಷಿ ಜಂಟಿ ನಿದೇಶಕರು ಬರಬೇಕೆಂದು ಪ್ರತಿಭಟನಾಕಾರರು ಪಟ್ಟು ಹಿಡಿದರು. ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ದೂರವಾಣಿ ಮೂಲಕ ಅವರನ್ನು ಸಂಪರ್ಕಿಸಿ ಪ್ರತಿಭಟನಾ ಸ್ಥಳಕ್ಕೆ ಕರೆಸಿದರು.

ಇದಾದ ನಂತರ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಆಗಮಿಸಿ ಪ್ರತಿಭಟನಾಕಾರರ ಮನವಿ ಆಲಿಸಿದರು. ನಾಳೆ ಸಂಜೆಯೊಳಗೆ ಜಿಲ್ಲೆಯ ಎಲ್ಲಾ ರೈತರಿಗೆ ಯೂರಿಯೂ ಗೊಬ್ಬರ ವಿತರಿಸುವ ಭರವಸೆ ನೀಡಿದರು. ಇದರಿಂದ ಪ್ರತಿಭಟನೆ ಹಿಂಪಡೆಯಲಾಯಿತು. ನಾಳೆ ಸಂಜೆಯೊಳಗೆ ಗೊಬ್ಬರವನ್ನು ವಿತರಣೆ ಮಾಡದಿದ್ದರೆ ಹೋರಾಟ ತ್ರೀವಗೊಳಿಸುವುದಾಗಿ ರೈತ ಮೋರ್ಚಾದ ಜಿಲ್ಲಾಧ್ಯಕ್ಷ ವೆಂಕಟೇಶ್ ಯಾದವ್ ಎಚ್ಚರಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!