ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿನ್ನಸ್ವಾಮಿ ಕ್ರೀಡಾಂಗಣ ಸಮೀಪ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ದುರ್ಘಟನೆಗೆ ಸಂಬಂಧಿಸಿದಂತೆ, ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಆಯೋಗದ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.
ನಿವೃತ್ತ ನ್ಯಾ. ಕುನ್ಹಾ ಆಯೋಗದ ವರದಿ ಪ್ರಶ್ನಿಸಿ ಡಿಎನ್‌ಎ ಮ್ಯಾನೇಜ್ಮೆಂಟ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಂಗಳವಾರ ಹೈಕೋರ್ಟ್ ನಡೆಯಿತು.
ಡಿಎನ್ಎ ಪರ ಹಿರಿಯ ವಕೀಲ ಸಂಪತ್ ಕುಮಾರ್ ಅವರು, ‘ನಾವು ಸಾಕ್ಷಿಗಳ ಹೇಳಿಕೆಯ ಪ್ರತಿಗಳನ್ನು ನೀಡುವಂತೆ ಅರ್ಜಿ ಸಲ್ಲಿಸಿದ್ದೆವು. ಆದರೆ ದಾಖಲೆಗಳನ್ನು ನೀಡದೇ, ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. ನಮಗೆ ಸ್ಪಷ್ಟನೆ ನೀಡುವ ಅವಕಾಶ ನೀಡದೇ, ನಮ್ಮ ವಿರುದ್ಧ ವರದಿ ಸಲ್ಲಿಸಲಾಗಿದ್ದು, ಇದರಿಂದ ಅರ್ಜಿದಾರರ ಗೌರವ ಹಾನಿಯಾಗುತ್ತಿದೆ’ ಎಂದು ವಾದಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು, ‘ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಅವರ ವರದಿಯನ್ನು ಹೈಕೋರ್ಟ್‌ಗೆ ಸಲ್ಲಿಸಲಾಗುತ್ತದೆ. ಆದರೆ ಈ ಹಂತದಲ್ಲಿ ವರದಿಯನ್ನು ಅರ್ಜಿದಾರರಿಗೆ ನೀಡಲು ಸಾಧ್ಯವಿಲ್ಲ’ ಎಂದು ತಿಳಿಸಿದರು.
ಈ ಕುರಿತು ಹೈಕೋರ್ಟ್, ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ.
ಜೂನ್ 4ರಂದು ನಡೆದಿದ್ದ ಕಾಲ್ತುಳಿತ ಪ್ರಕರಣದ ತನಿಖೆಗೆ, ರಾಜ್ಯ ಸರ್ಕಾರ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರ ನೇತೃತ್ವದಲ್ಲಿ ಮ್ಯಾಜಿಸ್ಟೀರಿಯಲ್ ತನಿಖಾ ತಂಡ ಹಾಗೂ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗ ರಚಿಸಿತ್ತು.