ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ವಿದ್ಯುತ್ ಸ್ಮಾರ್ಟ್ ಮೀಟರ್ ಅಳವಡಿಕೆ, ಟೆಂಡರ್ ಆಕ್ರಮ ಆರೋಪದ ಕೇಸ್ ನಲ್ಲಿ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ತನಿಖೆಗೆ ಆದೇಶ ನೀಡಿದ್ದ ಜನಪ್ರತಿನಿಧಿಗಳ ವಿಶೇಶ ಕೋರ್ಟ್ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ರಾಜ್ಯದಲ್ಲಿ ಇಂಧನ ಇಲಾಖೆಯು ಎಲ್ಲ ಮನೆಗಳಲ್ಲಿ ವಿದ್ಯುತ್ ಸ್ಮಾರ್ಟ್ ಮೀಟರ್ ಅಳವಡಿಕೆಗೆ ಆದೇಶ ನೀಡಿತ್ತು. ಬಳಿಕ ಟೆಂಡರ್ ಅನ್ನು ಕೂಡ ನೀಡಿತ್ತು. ಆದರೇ, ವಿದ್ಯುತ್ ಸ್ಮಾರ್ಟ್ ಮೀಟರ್ ಅಳವಡಿಕೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಬಿಜೆಪಿ ನಾಯಕರಾದ ಶಾಸಕ ಸಿ.ಎನ್.ಅಶ್ವಥ್ ನಾರಾಯಣ್, ಯಲಹಂಕ ಕ್ಷೇತ್ರದ ಶಾಸಕ ಎಸ್.ಆರ್.ವಿಶ್ವನಾಥ್, ಶಾಸಕ ಧೀರಜ್ ಮುನಿರಾಜ್ ಸೇರಿದಂತೆ ಕೆಲವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಕೇಸ್ ದಾಖಲಿಸಿದ್ದರು.
ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಈ ಅರ್ಜಿಗೆ ಮನ್ನಣೆ ನೀಡಿ, ರಾಜ್ಯದ ಇಂಧನ ಸಚಿವ ಕೆ.ಜೆ.ಜಾರ್ಜ್ ಹಾಗೂ ಬೆಸ್ಕಾಂ ಎಂ.ಡಿ. ಸೇರಿದಂತೆ ಅಧಿಕಾರಿಗಳ ವಿರುದ್ಧ ತನಿಖೆಗೆ ಲೋಕಾಯುಕ್ತಕ್ಕೆ ಆದೇಶ ನೀಡಿತ್ತು.
ಈ ಆದೇಶವನ್ನು ಪ್ರಶ್ನಿಸಿ ಇಂಧನ ಸಚಿವ ಕೆ.ಜೆ.ಜಾರ್ಜ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಇಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಿಚಾರಣೆ ನಡೆಸಿತು.
ವಾದ- ಪ್ರತಿವಾದ ಆಲಿಸಿದ ಹೈಕೋರ್ಟ್, ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ ವಿದ್ಯುತ್ ಸ್ಮಾರ್ಟ್ ಮೀಟರ್ ಅಳವಡಿಕೆ, ಟೆಂಡರ್ ಪ್ರಕರಣದಲ್ಲಿ ಲೋಕಾಯುಕ್ತ ತನಿಖೆಗೆ ನೀಡಿದ್ದ ಆದೇಶಕ್ಕೆ ತಡೆಯಾಜ್ಞೆ ನೀಡಿದೆ.
ಪ್ರತಿವಾದಿಗಳಾದ ಮಲ್ಲೇಶ್ವರ ಶಾಸಕ ಡಾ.ಸಿ.ಎನ್.ಅಶ್ವಥ್ ನಾರಾಯಣ್, ಎಸ್.ಆರ್.ವಿಶ್ವನಾಥ್, ಶಾಸಕ ಧೀರಜ್ ಮುನಿರಾಜ್ ಅವರಿಗೆ ನೋಟೀಸ್ ಜಾರಿ ಮಾಡಿದೆ. ಎರಡು ವಾರಗಳ ಕಾಲ ಹೈಕೋರ್ಟ್ ವಿಚಾರಣೆಯನ್ನು ಮುಂದೂಡಿದೆ.