ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕವನ್ನು ನಿರ್ಲಕ್ಷ್ಯ ಮಾಡಲಾಗಿದೆ ಎಂಬ ರಾಜ್ಯ ಸರ್ಕಾರದ ಟೀಕೆಗೆ ಪ್ರತಿಯಾಗಿ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. ಬಜೆಟ್‌ನ್ನು “ಕಾರ್ಪೊರೇಟ್ ಪರ” ಎಂದು ಕರೆದಿರುವ ಆರೋಪ ಸತ್ಯಕ್ಕೆ ದೂರವಾಗಿದ್ದು, ದೀರ್ಘಕಾಲದ ಅಭಿವೃದ್ಧಿ ದೃಷ್ಟಿಯಿಂದ ಯೋಜನೆಗಳನ್ನು ರೂಪಿಸಲಾಗಿದೆ ಎಂದು ಅವರು ಹೇಳಿದ್ದಾರೆ.
2014ರ ನಂತರದ ಅವಧಿಯಲ್ಲಿ ಕರ್ನಾಟಕಕ್ಕೆ ಹಿಂದಿನ ಸರ್ಕಾರಗಳಿಗಿಂತ ಹಲವಾರು ಪಟ್ಟು ಹೆಚ್ಚಿನ ಅನುದಾನ ನೀಡಲಾಗಿದೆ ಎಂದು ವಿವರಿಸಿದ ಅವರು, ಈ ಬಾರಿ ರೈಲ್ವೇ ಕ್ಷೇತ್ರಕ್ಕೆ ಮಾತ್ರವೇ ಸುಮಾರು 7,748 ಕೋಟಿ ಮಂಜೂರಾಗಿದೆ ಎಂದರು. ಹೊಸ ಮಾರ್ಗಗಳು, ನಿಲ್ದಾಣಗಳ ಪುನರ್ ಅಭಿವೃದ್ಧಿ, ಸುರಕ್ಷತಾ ಯೋಜನೆಗಳು ಹಾಗೂ ಬೆಂಗಳೂರು ಉಪನಗರ ರೈಲು ಯೋಜನೆ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಒಟ್ಟು 52,950 ಕೋಟಿ ಹೂಡಿಕೆ ಮಾಡಲಾಗುತ್ತಿದೆ ಎಂದು ಹೇಳಿದರು.
ಇದನ್ನೂ ಓದಿ:
ಅಮೃತ್ ಭಾರತ್ ಯೋಜನೆಯಡಿ ರಾಜ್ಯದ 61 ರೈಲು ನಿಲ್ದಾಣಗಳನ್ನು ನವೀಕರಿಸಲಾಗುತ್ತಿದ್ದು, ಸಾವಿರಾರು ಕೋಟಿ ವೆಚ್ಚದಲ್ಲಿ ಕಾಮಗಾರಿಗಳು ನಡೆಯುತ್ತಿವೆ. ಐಟಿ ಹಾಗೂ ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಹೊಸ ಹೂಡಿಕೆಗಳಿಂದ 40 ಸಾವಿರಕ್ಕೂ ಹೆಚ್ಚು ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದರು.
ಗ್ರಾಮೀಣ ಉದ್ಯೋಗ ಯೋಜನೆಗಳಲ್ಲಿಯೂ ಬದಲಾವಣೆ ತರಲಾಗುತ್ತಿದ್ದು, ವರ್ಷಕ್ಕೆ 100 ದಿನಗಳ ಬದಲು 125 ದಿನಗಳ ಕೆಲಸ ನೀಡುವ ಹೊಸ ಯೋಜನೆ ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ ಎಂದು ಸಚಿವರು ಹೇಳಿದರು.



