ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೂವರು ಮಕ್ಕಳ ತಾಯಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಗಂಡನ ಕಡೆಯಿಂದ ಗಂಡು ಮಗುವಿಗಾಗಿ ಬೇಡಿಕೆ ಇದ್ದು, ಕಿರುಕುಳದಿಂದಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಗಂಡು ಮಗುವಿನ ದುರಾಸೆಗೆ ಪತಿ ಕಿರುಕುಳ ನೀಡಿ ಕೊಲೆ ಮಾಡಿದ್ದಾನೆ ಎಂದು ಮೃತ ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದು, ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತೆ ರೇಣುಕಾ (32), ಭೀಮೇಶ್ವರ ಕಾಲೋನಿಯ ನಿವಾಸಿ. 17 ವರ್ಷಗಳ ಹಿಂದೆ ಶಿವನಂಜಪ್ಪ (40) ಎಂಬುವವರ ಜೊತೆ ಇವರ ವಿವಾಹವಾಗಿತ್ತು. ಈ ದಂಪತಿಗೆ ಮೂವರು ಹೆಣ್ಣು ಮಕ್ಕಳಿದ್ದಾರೆ. ಆದರೆ, ಗಂಡು ಮಗುವಿನ ಆಸೆಯಿಂದ ಶಿವನಂಜಪ್ಪ ರೇಣುಕಾ ಅವರಿಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದರು ಎಂದು ತಿಳಿದುಬಂದಿದೆ.
ನಿನ್ನೆ ರಾತ್ರಿ (ವರಮಹಾಲಕ್ಷ್ಮಿ ಹಬ್ಬದ ಹಿಂದಿನ ದಿನ) ಇದೇ ವಿಚಾರಕ್ಕೆ ದಂಪತಿ ನಡುವೆ ತೀವ್ರ ಗಲಾಟೆ ನಡೆದಿದೆ. ಈ ವೇಳೆ ಶಿವನಂಜಪ್ಪ ರೇಣುಕಾ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ. ಹಲ್ಲೆ ನಂತರ ರೇಣುಕಾ ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದ್ದು, ಆದರೆ ಗಂಡನೇ ಹೊಡೆದು ನೇಣು ಹಾಕಿ ಕೊಲೆ ಮಾಡಿದ್ದಾನೆ ಎಂದು ಮೃತ ಮಹಿಳೆಯ ಕುಟುಂಬದವರು ಗಂಭೀರ ಆರೋಪ ಮಾಡಿದ್ದಾರೆ.