ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ಕ್ರಿಕೆಟ್ ಪ್ರಿಯರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಆರ್‌ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತದ ಬಳಿಕ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಇದೀಗ ಬೆಂಗಳೂರಿನ ಹೊರವಲಯದಲ್ಲಿ ಕ್ರೀಡಾಂಗಣ ನಿರ್ಮಿಸಲು ಹಸಿರು ನಿಶಾನೆ ತೋರಿದೆ.
ಬೊಮ್ಮಸಂದ್ರದಲ್ಲಿರುವ ಸೂರ್ಯ ಸಿಟಿಯಲ್ಲಿ 80,000 ಆಸನ ಸಾಮರ್ಥ್ಯದ ಕ್ರಿಕೆಟ್ ಕ್ರೀಡಾಂಗಣ ಸೇರಿದಂತೆ ಅತ್ಯಾಧುನಿಕ ಕ್ರೀಡಾ ಸಂಕೀರ್ಣವನ್ನು ನಿರ್ಮಿಸುವ ಕರ್ನಾಟಕ ವಸತಿ ಮಂಡಳಿಯ ಪ್ರಸ್ತಾವನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಸ್ಟ್ 8 ರಂದು ಅನುಮೋದನೆ ನೀಡಿದ್ದಾರೆ.
ಮಾಹಿತಿಯ ಪ್ರಕಾರ ರಾಜ್ಯದಲ್ಲಿ ನಿರ್ಮಾಣವಾಗುತ್ತಿರುವ ಈ ಕ್ರೀಡಾಂಗಣ ದೇಶದ ಎರಡನೇ ಅತಿದೊಡ್ಡ ಕ್ರೀಡಾಂಗಣವಾಗಲಿದೆ ಎಂಬ ಮಾಹಿತಿ ಇದೆ. ಪ್ರಸ್ತುತ 1,32,000 ಆಸನ ಸಾಮರ್ಥ್ಯ ಹೊಂದಿರುವ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣ ದೇಶದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾಗಿದೆ.
ವಾಸ್ತವವಾಗಿ ರಾಜ್ಯದಲ್ಲಿ ಯಾವುದೇ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್ ಈವೆಂಟ್ಗಳು ನಡೆದರೆ, ಅದಕ್ಕೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ ಆತಿಥ್ಯವಹಿಸುತ್ತಿತ್ತು. ಕೇವಲ 17 ಎಕರೆ ವಿಸ್ತೀರ್ಣದಲ್ಲಿ ಹರಡಿರುವ ಚಿನ್ನಸ್ವಾಮಿ ಕ್ರೀಡಾಂಗಣ ಕೇವಲ 32 ಸಾವಿರ ಆಸನ ಸಾಮರ್ಥ್ಯವನ್ನು ಹೊಂದಿದೆ. ಬೆಳೆಯುತ್ತಿರುವ ಕ್ರಿಕೆಟ್ನ ಜನಪ್ರಿಯತೆಯನ್ನು ನೋಡಿದಾಗ ಮುಂದಿನ ದಿನಗಳಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪ್ರಮುಖ ಪಂದ್ಯಾವಳಿಗಳನ್ನು ಆಯೋಜಿಸುವುದು ಕಷ್ಟ ಸಾಧ್ಯವಾಗಿದೆ.