ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮವಾಗಿ ನದಿಗಳು ಉಕ್ಕಿ ಹರಿಯುತ್ತಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಪ್ರವಾಹ ಮತ್ತು ಭೂಕುಸಿತಗಳ ವರದಿಗಳು ಹೆಚ್ಚುತ್ತಿವೆ.
ಈ ನಡುವೆ ಶನಿವಾರ ರಾತ್ರಿಯಿಂದ ಭಾನುವಾರ ಬೆಳಗಿನವರೆಗೆ ಸುರಿದ ಅತೀವ ಮಳೆಯ ಪರಿಣಾಮವಾಗಿ ಕಥುವಾ ಜಿಲ್ಲೆಯ ಜೋಧ್ ಘಾಟಿ ಗ್ರಾಮದಲ್ಲಿ ಭೀಕರ ಮೇಘಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ ನಾಲ್ವರು ಜೀವ ಕಳೆದುಕೊಂಡಿದ್ದು, ಕನಿಷ್ಠ ಆರು ಮಂದಿ ಗಾಯಗೊಂಡಿದ್ದಾರೆ. ಹಲವು ಮನೆಗಳು ಹಾನಿಗೊಳಗಾಗಿದ್ದು, ರೈಲ್ವೆ ಹಳಿಗಳು ಮತ್ತು ಜಮ್ಮು-ಪಠಾಣ್‌ಕೋಟ್ ರಾಷ್ಟ್ರೀಯ ಹೆದ್ದಾರಿಗೂ ಗಂಭೀರ ಹಾನಿಯಾಗಿದೆ.
ಜೋಧ್ ಘಾಟಿ ಪ್ರದೇಶ ಸಂಪೂರ್ಣವಾಗಿ ಸಂಪರ್ಕ ಕಳೆದುಕೊಂಡಿದೆ. ಪ್ರವಾಹದಿಂದ ರಸ್ತೆ ಕೊಚ್ಚಿಹೋಗಿರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ತೀವ್ರ ಅಡಚಣೆ ಉಂಟಾಗಿದೆ. ಭೂಕುಸಿತದಿಂದ ಬಗಾರ್ಡ್ ಹಾಗೂ ಚಂಗದ ಗ್ರಾಮಗಳಲ್ಲಿಯೂ ಹಾನಿ ಸಂಭವಿಸಿದ್ದು, ಉಝ್ ನದಿಯ ನೀರಿನ ಮಟ್ಟ ಅಪಾಯಕಾರಿ ಮಟ್ಟಕ್ಕೆ ಏರಿದೆ. ಪೊಲೀಸ್, ಎಸ್‌ಡಿಆರ್‌ಎಫ್ ಹಾಗೂ ಸ್ಥಳೀಯ ಸ್ವಯಂಸೇವಕರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತರ ಶವಗಳನ್ನು ಪತ್ತೆಹಚ್ಚಿ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ.
ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಈ ಘಟನೆಗೆ ಸಂತಾಪ ಸೂಚಿಸಿ, ಸಂತ್ರಸ್ತ ಕುಟುಂಬಗಳಿಗೆ ತಕ್ಷಣದ ಪರಿಹಾರ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಪರಿಸ್ಥಿತಿಯನ್ನು ನೇರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದು, ಸೇನೆ ಮತ್ತು ಅರೆಸೈನಿಕ ಪಡೆಗಳನ್ನು ಕಾರ್ಯಪ್ರವೃತ್ತಗೊಳಿಸಲಾಗಿದೆ.