ಹೊಸದಿಗಂತ ಡಿಜಿಟಲ್ ಡೆಸ್ಕ್:
ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ವಿಧಾನಸಭೆ ಕಲಾಪದ ವೇಳೆ ನಡೆದ ಚರ್ಚಾ ಸಮಯದಲ್ಲಿ ಮಾತನಾಡಿದ ಅವರು, ಜವಾಬ್ದಾರಿಯುತ ದಕ್ಷ ಹಿರಿಯ ಅಧಿಕಾರಿಗಳಿಗೆ ತನಿಖೆಯ ಜವಾಬ್ದಾರಿ ನೀಡಲಾಗಿದೆ. ಅಧಿಕಾರಿಗಳ ಮೇಲೆ ನಮಗೆ ನಂಬಿಕೆಯಿದೆ. ಮುಖ್ಯಮಂತ್ರಿಗಳು ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾಲಯಕ್ಕೆ ತೆರಳಿ ಪ್ರತಿವರ್ಷ ಚಿಕಿತ್ಸೆ ಪಡೆದುಕೊಂಡು ಬಂದಿದ್ದಾರೆ. ಅವರಿಗೂ ಆ ಕ್ಷೇತ್ರದ ಮೇಲೆ ನಂಬಿಕೆಯಿದೆ. ಸಿಎಲ್ಪಿ ಸಭೆಯಲ್ಲಿ ಶಾಸಕರಾದ ಶಿವಲಿಂಗೇಗೌಡರು ಹಾಗೂ ಬೇಳೂರು ಗೋಪಾಲಕೃಷ್ಣ ಅವರು ಪ್ರಸ್ತಾಪಿಸಿದಾಗ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದರು.
ಯಾವುದೇ ಗೌಪ್ಯ ಮಾಹಿತಿಗಳನ್ನು ಬಹಿರಂಗಗೊಳಿಸುವುದಿಲ್ಲ ಎಂದು ಗೃಹಸಚಿವರು ಪ್ರಮಾಣ ವಚನ ತೆಗೆದುಕೊಂಡಿರುತ್ತಾರೆ. ವಿರೋಧ ಪಕ್ಷದಲ್ಲಿ ಇರುವ ನೀವುಗಳು ಸಹ ಅಧಿಕಾರದಲ್ಲಿದ್ದವರು. ತನಿಖೆ ವಿಚಾರವನ್ನು ಬಹಿರಂಗಪಡಿಸುವ ಮೊದಲು ಎಲ್ಲರೂ ತಾಳ್ಮೆಯಿಂದ ಇರಬೇಕು. ರಾಜಕಾರಣದಲ್ಲಿ ಧರ್ಮ ಇರಬೇಕೇ ಹೊರತು ಧರ್ಮದಲ್ಲಿ ರಾಜಕಾರಣವಿರಬಾರದು. ಇದರಲ್ಲಿ ರಾಜಕೀಯ ಮಾಡಬೇಡಿ ಎಂದರು.