ಹೊಸದಿಗಂತ ಡಿಜಿಟಲ್ ಡೆಸ್ಕ್:
ಇನ್ನೇನು ಕೆಲವೇ ದಿನಗಳಲ್ಲಿ ಗಣೇಶನ ಚತುರ್ಥಿ ಆಗಮನವಾಗಲಿದೆ. ಈ ಬಾರಿ ಪಿಒಪಿ ಗಣೇಶ ತಯಾರಿ ಮಾಡಿದರೆ, ಮಾರಾಟ ಮಾಡಿದರೆ ಕ್ರಿಮಿನಲ್ ಕೇಸ್ ದಾಖಲಿಸಲಾಗುತ್ತದೆ ಎಂದು ಬಿಬಿಎಂಪಿ ಖಡಕ್ ಎಚ್ಚರಿಕೆ ನೀಡಿದೆ.
ಆಯಾ ಬಿಬಿಎಂಪಿ ಉಪವಿಭಾಗಗಳ ನೋಡಲ್ ಅಧಿಕಾರಿಗಳು, ಪೊಲೀಸ್, ಅಗ್ನಿಶಾಮಕ ಮತ್ತು ಬೆಸ್ಕಾಂ ಇಲಾಖೆಗಳ ಅಧಿಕಾರಿಗಳಿಗೆ ಗಣೇಶ ಮೂರ್ತಿಗಳ ತಯಾರಿಕೆ ಮತ್ತು ಮಾರಾಟ ಎರಡರ ಮೇಲೂ ನಿಗಾ ಇರಿಸುವಂತೆ ಸೂಚನೆ ನೀಡಲಾಗಿದೆ.
ಗಣೇಶ ಚತುರ್ಥಿಯ ಪರಿಸರ ಸ್ನೇಹಿ ಆಚರಣೆಯ ದೃಷ್ಟಿಯಿಂದ ಬಿಬಿಎಂಪಿ ಮಾರ್ಗಸೂಚಿ ಹೊರಡಿಸಲಾಗಿದೆ. ಗಣೇಶ ಮೂರ್ತಿ ತಯಾರಿಕೆಯಲ್ಲಿ ರಾಸಾಯನಿಕ ಬಣ್ಣಗಳು, ಥರ್ಮೋಕೋಲ್ ಮತ್ತು ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸುವ ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತ ಎಂ. ಮಹೇಶ್ವರ್ ರಾವ್ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ಈ ವಸ್ತುಗಳನ್ನು ಬಳಸಿ ತಯಾರಿಸಿದ ವಿಗ್ರಹಗಳನ್ನು ವಶಪಡಿಸಿಕೊಳ್ಳಲಾಗುತ್ತದೆ ಮತ್ತು ನಿಯಮಗಳ ಪ್ರಕಾರ ವಿಲೇವಾರಿ ಮಾಡಲಾಗುತ್ತದೆ ಎಂದು ಬಿಬಿಎಂಪಿ ತಿಳಿಸಿದೆ.
ನೈಸರ್ಗಿಕವಾದ ಜೇಡಿಮಣ್ಣಿನಿಂದ ತಯಾರಿಸಿದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ತಯಾರಿಸಬೇಕೆಂದು ಬಿಬಿಎಂಪಿ ಸೂಚನೆ ನೀಡಿದೆ.