ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ವಿರುದ್ಧ ಅವಹೇಳನಕಾರಿ ಮಾತನಾಡಿದ ಆರೋಪದಲ್ಲಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಪೊಲೀಸರು ಬಂಧಿಸಿದ್ದು, ಬಳಿಕ ಅವರಿಗೆ ವೈದ್ಯಕೀಯ ತಪಾಸಣೆ ನಡೆಸಿ ನಂತರ ಕೋರ್ಟ್‌ಗೆ ಹಾಜರುಪಡಿಸಲಾಯಿತು. ಈ ವೇಳೆ ವಿಚಾರಣೆ ನಡೆಸಿದ ಬ್ರಹ್ಮಾವರ ತಾಲೂಕು ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಮುಂದಿನ ವಿಚಾರಣೆಯನ್ನು ಆಗಸ್ಟ್ 23ಕ್ಕೆ ಮುಂದೂಡಿದೆ.
ಕಳೆದ ಕೆಲವು ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ವಿಡಿಯೋ ಹರಿದಾಡಿದ್ದು, ಇದರ ಬೆನ್ನಿಗೇ ವ್ಯಕ್ತಿಯೋರ್ವರು ಬ್ರಹ್ಮಾವರ ಠಾಣೆಗೆ ದೂರು ನೀಡಿದ್ದರು. ವಿಚಾರಣೆಗೆ ಹಾಜರಾಗುವಂತೆ ಬ್ರಹ್ಮಾವರ ಪೊಲೀಸರು ಎರಡು ಬಾರಿ ನೋಟಿಸ್ ಜಾರಿ ಮಾಡಿದ್ದರೂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಇಂದು ಬೆಳ್ತಂಗಡಿ ತಾಲೂಕು ಉಜಿರೆಯ ಮಹೇಶ್ ಶೆಟ್ಟಿ ನಿವಾಸಕ್ಕೆ ಆಗಮಿಸಿದ್ದ ಪೊಲೀಸರು ಅವರನ್ನು ವಶಕ್ಕೆ ಪಡೆದು ಬ್ರಹ್ಮಾವರಕ್ಕೆ ಕರೆದೊಯ್ದಿದ್ದು, ಕೆಲಕಾಲ ವಿಚಾರಣೆ ನಡೆಸಿದ ಬಳಿಕ ಅವರನ್ನು ಬಂಧಿಸಿದರು.