ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಶಾಲಾ ಮಕ್ಕಳು ಸೇರಿದಂತೆ ನಾಲ್ವರು ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಜಿಲ್ಲೆಯ ವರುದ್-ರಾಜುರಾ ಬಜಾರ್ ರಸ್ತೆಯಲ್ಲಿ ಮಹಾರಾಷ್ಟ್ರ ರಾಜ್ಯ ಸಾರಿಗೆ ಬಸ್ ಹಾಗೂ ಪ್ರಯಾಣಿಕರಿಂದ ತುಂಬಿದ್ದ ಆಟೋ ರಿಕ್ಷಾ ನಡುವೆ ಈ ಭೀಕರ ಅಪಘಾತ ನಡೆದಿದೆ.
ಮಾಹಿತಿಯ ಪ್ರಕಾರ, ವರುದ್ ತಾಲೂಕಿನ ಗ್ರಾಮೀಣ ಭಾಗದ ಶಾಲಾ ಮಕ್ಕಳು ಹಾಗೂ ಕೆಲವು ಸ್ಥಳೀಯ ನಾಗರಿಕರು ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಸಾರಿಗೆ ಬಸ್ ಆಟೋಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆಟೋ ರಿಕ್ಷಾ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ರಸ್ತೆಯ ಮೇಲೆ ತುಂಡು ತುಂಡಾಗಿ ಬಿದ್ದಿದೆ.
ಅಪಘಾತದ ತೀವ್ರತೆಗೆ ರಿಕ್ಷಾದಲ್ಲಿದ್ದ ನಾಲ್ವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಮೃತರಲ್ಲಿ ಶಾಲಾ ವಿದ್ಯಾರ್ಥಿಗಳೂ ಸೇರಿರುವುದು ದುರಂತದ ತೀವ್ರತೆಯನ್ನು ಹೆಚ್ಚಿಸಿದೆ.
ಅಪಘಾತದಲ್ಲಿ ಮೂವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ನಾಗ್ಪುರದ ಆಸ್ಪತ್ರೆಗೆ ರವಾನಿಸಲಾಗಿದೆ.
ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಜಮಾಯಿಸಿದ್ದು, ಆಕ್ರೋಶ ಮತ್ತು ಆಕ್ರಂದನ ಮುಗಿಲು ಮುಟ್ಟಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮಕ್ಕಳ ಸಾವಿನಿಂದ ಇಡೀ ವರುದ್ ತಾಲೂಕಿನಲ್ಲಿ ಶೋಕದ ಛಾಯೆ ಆವರಿಸಿದ್ದು, ಅತಿ ವೇಗ ಮತ್ತು ಅಜಾಗರೂಕತೆಯೇ ಈ ದುರಂತಕ್ಕೆ ಕಾರಣ ಎನ್ನಲಾಗುತ್ತಿದೆ.



