ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಗೆ ‘ಕಿತ್ತೂರು ರಾಣಿ ಚೆನ್ನಮ್ಮ ಸಾರಿಗೆ ಸಂಸ್ಥೆ’ ಎಂದು ನಾಮಕರಣ ಮಾಡಲು ಶೀಘ್ರವೇ ಕ್ರಮ ವಹಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ಇಂದು ನಡೆದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 28ನೇ ಸಂಸ್ಥಾಪನಾ ದಿನಾಚರಣೆಯಲ್ಲಿ, ಸಂಸ್ಥೆಗೆ ಮಂಜೂರಾದ 700 ವಾಹನಗಳ ಪೈಕಿ 250 ಬಸ್‌ಗಳನ್ನು ಇಂದು ಅವರು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಕಳೆದ ಆಯವ್ಯಯದಲ್ಲಿ ಘೋಷಿಸಿದಂತೆ ಎರಡು ಸಾವಿರ ಹೊಸ ಬಸ್‌ಗಳ ಖರೀದಿ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಇದೆ ಸಂದರ್ಭ ಅವರು ಮಾಹಿತಿ ನೀಡಿದರು.
ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮಾತನಾಡಿ, ಜಿಲ್ಲೆಯ ಬಹುದಿನಗಳ ಬೇಡಿಕೆಗಳು ಇಂದು ಈಡೇರಿವೆ. ಪ್ರಸ್ತುತ 7,800 ಹೊಸ ಬಸ್‌ಗಳನ್ನು ಖರೀದಿಸಲಾಗುತ್ತಿದ್ದು, 9,000 ಅಭ್ಯರ್ಥಿಗಳ ನೇಮಕಾತಿ ಹಾಗೂ 1,000 ಅಭ್ಯರ್ಥಿಗಳಿಗೆ ಅನುಕಂಪದ ಆಧಾರದ ಮೇಲೆ ನೇಮಕಾತಿ ಮಾಡಿರುವುದು ದಾಖಲೆಯಾಗಿದೆ ಎಂದು ತಿಳಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ಹಗಲು-ರಾತ್ರಿ ಶ್ರಮವಹಿಸುವ ಸಾರಿಗೆ ಇಲಾಖೆ ಸಿಬ್ಬಂದಿಯ ಕಾರ್ಯವನ್ನು ಶ್ಲಾಘಿಸಿದರು. ಇದೇ ಸಂದರ್ಭದಲ್ಲಿ ಅಪಘಾತ ರಹಿತ ಚಾಲನೆ ಮಾಡಿದ 68 ಚಾಲಕರಿಗೆ ಬೆಳ್ಳಿ ಪದಕ, 188 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ಹಾಗೂ ವೈಯಕ್ತಿಕ ಅಪಘಾತ ಮತ್ತು ಕುಟುಂಬ ಕಲ್ಯಾಣ ನಿಧಿ ಯೋಜನೆಯ ಪರಿಹಾರ ಚೆಕ್‌ಗಳನ್ನು ವಿತರಿಸಲಾಯಿತು.



