March 2, 2026
Monday, March 2, 2026
spot_img

ಆನೆ ದಾಳಿಗೆ ವಿದ್ಯಾರ್ಥಿನಿ ಬಲಿ: ಅಧಿಕಾರಿಗಳ ಬೇಜವಾಬ್ದಾರಿಗೆ ಗ್ರಾಮಸ್ಥರ ಆಕ್ರೋಶ

ಹೊಸದಿಗಂತ ಮಡಿಕೇರಿ:

ಬೆಟ್ಟತ್ತೂರು ಗ್ರಾಮದಲ್ಲಿ ಶನಿವಾರ ಸಂಜೆ ಕಾಡಾನೆ ದಾಳಿಗೆ ವಿದ್ಯಾರ್ಥಿನಿಯೊಬ್ಬಳು ದಾರುಣವಾಗಿ ಸಾವನ್ನಪ್ಪಿದ ಘಟನೆಯನ್ನು ಖಂಡಿಸಿ, ಭಾನುವಾರ ಮದೆ ಗ್ರಾಮದ ಬಳಿ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆದು ಗ್ರಾಮಸ್ಥರು ಬೃಹತ್ ಪ್ರತಿಭಟನೆ ನಡೆಸಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿಗಳು ಮೃತ ವಿದ್ಯಾರ್ಥಿನಿಯ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದರು. ಆದರೆ, ಅಚ್ಚರಿಯೆಂದರೆ ಈ ಚೆಕ್‌ನಲ್ಲಿ ಅರಣ್ಯಾಧಿಕಾರಿಗಳ ಸಹಿಯೇ ಇರಲಿಲ್ಲ! ಅಧಿಕಾರಿಗಳ ಈ ಬೇಜವಾಬ್ದಾರಿತನವನ್ನು ಗಮನಿಸಿದ ಗ್ರಾಮಸ್ಥರು ಸ್ಥಳದಲ್ಲೇ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಇದು ಸಂತ್ರಸ್ತ ಕುಟುಂಬಕ್ಕೆ ಮಾಡಿದ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹಿಸಿದರು.

ಗ್ರಾಮಸ್ಥರ ಪ್ರಮುಖ ಬೇಡಿಕೆಗಳು:

ಮೃತ ವಿದ್ಯಾರ್ಥಿನಿಯ ಸಹೋದರನಿಗೆ ತಕ್ಷಣವೇ ಸರ್ಕಾರಿ ಉದ್ಯೋಗ ನೀಡಬೇಕು.

ಕಾಡಾನೆಗಳ ಹಾವಳಿಯನ್ನು ತಡೆಯಲು ಶಾಶ್ವತ ಪರಿಹಾರ ಕಂಡುಕೊಳ್ಳಬೇಕು.

ಸಹಿ ಇಲ್ಲದ ಚೆಕ್ ನೀಡಿದ ಅಧಿಕಾರಿಯ ಮೇಲೆ ಕ್ರಮ ಜರುಗಿಸಬೇಕು.

ಸ್ಥಳದಲ್ಲಿದ್ದ ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳು ಗ್ರಾಮಸ್ಥರ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು. ಅಲ್ಲದೆ, ಘಟನೆಗೆ ಕಾರಣವಾದ ಕಾಡಾನೆಯನ್ನು ಸೆರೆಹಿಡಿಯಲು ಇಂದಿನಿಂದಲೇ ‘ಕೂಂಬಿಂಗ್ ಕಾರ್ಯಾಚರಣೆ’ ಆರಂಭಿಸುವುದಾಗಿ ತಿಳಿಸಿದ ನಂತರ ಪ್ರತಿಭಟನೆ ತಣ್ಣಗಾಯಿತು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !