March 2, 2026
Monday, March 2, 2026
spot_img

ವಿದೇಶದಲ್ಲಿರುವ ಕನ್ನಡಿಗರ ಸುರಕ್ಷತೆಗೆ ಸರ್ಕಾರ ಸನ್ನದ್ಧ: ಮೋದಿ ಸಹಾಯ ಕೋರಿದ ಸಿಎಂ ಸಿದ್ದು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದ ಭೀತಿಯಿಂದಾಗಿ ಮಧ್ಯಪ್ರಾಚ್ಯದಲ್ಲಿ ಅನಿಶ್ಚಿತತೆ ನಿರ್ಮಾಣವಾಗಿದ್ದು, ಅಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಪಶ್ಚಿಮ ಏಷ್ಯಾದಲ್ಲಿ ಉಲ್ಬಣಿಸುತ್ತಿರುವ ಭೌಗೋಳಿಕ ಮತ್ತು ರಾಜಕೀಯ ಬಿಕ್ಕಟ್ಟುಗಳು ವಿಮಾನಯಾನದ ಮೇಲೆ ಗಂಭೀರ ಪರಿಣಾಮ ಬೀರಿವೆ. ಇದರಿಂದಾಗಿ ಯುಎಇ ಹಾಗೂ ಪ್ರಮುಖವಾಗಿ ದುಬೈನಲ್ಲಿ ಹೆಚ್ಚಿನ ಸಂಖ್ಯೆಯ ಕನ್ನಡಿಗರು ಮತ್ತು ಭಾರತೀಯರು ಸಿಲುಕಿಕೊಂಡಿದ್ದು, ಅವರಲ್ಲಿ ಆತಂಕ ಮನೆಮಾಡಿದೆ. ಈ ಹಿನ್ನೆಲೆಯಲ್ಲಿ ವಿದೇಶಾಂಗ ಮತ್ತು ನಾಗರಿಕ ವಿಮಾನಯಾನ ಸಚಿವಾಲಯಗಳ ಮೂಲಕ ತಕ್ಷಣದ ಕ್ರಮಕ್ಕೆ ಸಿಎಂ ಆಗ್ರಹಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಪ್ರಮುಖ ಬೇಡಿಕೆಗಳು:

ಸಂಕಷ್ಟದಲ್ಲಿರುವವರನ್ನು ಕರೆತರಲು ಅಗತ್ಯವಿದ್ದರೆ ವಿಶೇಷ ವಿಮಾನಗಳನ್ನು ನಿಯೋಜಿಸುವುದು. ಭಾರತೀಯ ರಾಯಭಾರ ಕಚೇರಿಗಳ ಮೂಲಕ ಅಲ್ಲಿನ ಜನರಿಗೆ ನಿರಂತರ ಮಾರ್ಗದರ್ಶನ ಮತ್ತು ರಕ್ಷಣೆ ಒದಗಿಸುವುದು. ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನಡುವೆ ಸುಗಮ ಸಂವಹನಕ್ಕಾಗಿ ಪ್ರತ್ಯೇಕ ಕಾರ್ಯಪಡೆ ರಚಿಸುವುದು. ಸಂತ್ರಸ್ತರನ್ನು ಪತ್ತೆಹಚ್ಚಲು ಮತ್ತು ಅವರ ಕುಟುಂಬಗಳಿಗೆ ನಿಖರ ಮಾಹಿತಿ ನೀಡಲು ಕೇಂದ್ರೀಕೃತ ಡಿಜಿಟಲ್ ವ್ಯವಸ್ಥೆ ರೂಪಿಸುವುದು. ಟಿಕೆಟ್ ಮರುಹೊಂದಾಣಿಕೆಗೆ ವಿಮಾನಯಾನ ಸಂಸ್ಥೆಗಳು ದಂಡ ವಿಧಿಸದಂತೆ ಸೂಚನೆ ನೀಡುವುದು.

ಇತ್ತ ಕರ್ನಾಟಕ ಸರ್ಕಾರವು ಈಗಾಗಲೇ ತನ್ನ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರವನ್ನು 24/7 ಸಕ್ರಿಯಗೊಳಿಸಿದೆ. ದೆಹಲಿಯಲ್ಲಿರುವ ಕರ್ನಾಟಕ ಭವನದ ಅಧಿಕಾರಿಗಳು ಕೇಂದ್ರ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಪ್ರತಿಯೊಬ್ಬ ಕನ್ನಡಿಗರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಪತ್ರದಲ್ಲಿ ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !