ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಕಾಂಗ್ರೆಸ್ ಸರ್ಕಾರವು ಮೀಸಲಾತಿ ಅನುಷ್ಠಾನದಲ್ಲಿ ಗೊಂದಲ ಸೃಷ್ಟಿಸುವ ಮೂಲಕ ಎಸ್‌ಸಿ, ಎಸ್‌ಟಿ ಹಾಗೂ ಹಿಂದುಳಿದ ವರ್ಗದ ಸಮುದಾಯಗಳಿಗೆ ದ್ರೋಹ ಮಾಡುತ್ತಿದೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಅವರು ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ. ಈ ಅನ್ಯಾಯದ ವಿರುದ್ಧ ಮುಂದಿನ ದಿನಗಳಲ್ಲಿ ಬಿಜೆಪಿ ವತಿಯಿಂದ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಸರ್ಕಾರದ ವಿರುದ್ಧ ಹಲವು ಗಂಭೀರ ಆರೋಪಗಳನ್ನು ಮಾಡಿದರು:
“ಅಧಿಕಾರಕ್ಕೆ ಬರುವ ಮುನ್ನ ನೀಡಿದ ಯಾವ ಭರವಸೆಗಳನ್ನೂ ಸರ್ಕಾರ ಈಡೇರಿಸಿಲ್ಲ. ವರ್ಷಕ್ಕೆ ಒಂದು ಲಕ್ಷ ಹುದ್ದೆ ಭರ್ತಿ ಮಾಡುವುದಾಗಿ ಹೇಳಿದ್ದ ಸರ್ಕಾರ, ಒಂದು ವರ್ಷ ಕಳೆದರೂ ಯಾವುದೇ ಕ್ರಮ ಕೈಗೊಂಡಿಲ್ಲ,” ಎಂದು ದೂರಿದರು.
ರಾಜ್ಯದಲ್ಲಿ ಪ್ರಸ್ತುತ ಸುಮಾರು 2.85 ಲಕ್ಷ ಹುದ್ದೆಗಳು ಖಾಲಿ ಇವೆ. ಯುವಕರು ಉದ್ಯೋಗಕ್ಕಾಗಿ ಬೀದಿಗಿಳಿದು ಹೋರಾಟ ಮಾಡುತ್ತಿದ್ದರೂ ಸರ್ಕಾರ ಮಾತ್ರ ಕುಂಭಕರ್ಣ ನಿದ್ದೆಯಲ್ಲಿದೆ.
ನೇಮಕಾತಿ ಏಕೆ ನಡೆಯುತ್ತಿಲ್ಲ ಎಂದು ಪ್ರಶ್ನಿಸಿದರೆ ಮೀಸಲಾತಿ ಸಮಸ್ಯೆ ಎಂದು ಸರ್ಕಾರ ಕುಂಟು ನೆಪ ಹೇಳುತ್ತಿದೆ. ಮೀಸಲಾತಿ ಎಂಬುದು ಸಂವಿಧಾನಬದ್ಧ ಹಕ್ಕು. ಬಸವರಾಜ ಬೊಮ್ಮಾಯಿ ಅವರ ಆಡಳಿತಾವಧಿಯಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಲು ನಮ್ಮ ಸರ್ಕಾರ ದಿಟ್ಟ ನಿರ್ಧಾರ ಮಾಡಿತ್ತು ಎಂದು ಅವರು ಸ್ಮರಿಸಿದರು.
“ಯುವಕರು ಬೀದಿಗಿಳಿದು ಪ್ರತಿಭಟಿಸಿ, ಬಾರುಕೋಲಿನಿಂದ ಹೊಡೆದ ಮೇಲೆ ಈ ದಪ್ಪ ಚರ್ಮದ ಸರ್ಕಾರಕ್ಕೆ ಎಚ್ಚರವಾಗಿದೆ. ಈಗ 50 ಸಾವಿರ ಹುದ್ದೆಗಳ ಭರ್ತಿಗೆ ಮುಂದಾಗಿದೆ. ಇಷ್ಟು ದಿನ ಯುವಕರ ನೋವು ಇವರಿಗೆ ಕೇಳಿಸಲಿಲ್ಲವೇ?” ಎಂದು ಶ್ರೀರಾಮುಲು ಆಕ್ರೋಶ ವ್ಯಕ್ತಪಡಿಸಿದರು.



