ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಡಾ. ಫಾರೂಕ್ ಅಬ್ದುಲ್ಲಾ ಅವರ ಮೇಲೆ ಜಮ್ಮುವಿನಲ್ಲಿ ಗುಂಡಿನ ದಾಳಿ ಯತ್ನ ನಡೆದಿದ್ದು, ಅವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
ಈ ಘಟನೆ ಬುಧವಾರ (ಮಾರ್ಚ್ 11) ಜಮ್ಮುವಿನ ಗ್ರೇಟರ್ ಕೈಲಾಶ್ ಪ್ರದೇಶದಲ್ಲಿ ನಡೆದ ವಿವಾಹ ಸಮಾರಂಭದ ವೇಳೆ ಸಂಭವಿಸಿದೆ.
ವಿವಾಹ ಕಾರ್ಯಕ್ರಮಕ್ಕೆ ಹಾಜರಾಗಿದ್ದ ಫಾರೂಕ್ ಅಬ್ದುಲ್ಲಾ ಹೊರಗೆ ಬರುತ್ತಿದ್ದ ವೇಳೆ ಕಮಲ್ ಸಿಂಗ್ ಜಮ್ವಾಲ್ ಎಂಬಾತ ಪಿಸ್ತೂಲ್‌ನೊಂದಿಗೆ ಅವರತ್ತ ಸಮೀಪಿಸಿ ಗುಂಡು ಹಾರಿಸಲು ಯತ್ನಿಸಿದ್ದಾನೆ. ಆದರೆ ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿ ತಕ್ಷಣವೇ ಎಚ್ಚರಗೊಂಡು ದಾಳಿಯನ್ನು ವಿಫಲಗೊಳಿಸಿದ್ದಾರೆ. ಬಳಿಕ ಆರೋಪಿಯನ್ನು ವಶಕ್ಕೆ ಪಡೆದು ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ:
ಈ ವೇಳೆ ಫಾರೂಕ್ ಅಬ್ದುಲ್ಲಾ ಅವರೊಂದಿಗೆ ಜಮ್ಮು ಮತ್ತು ಕಾಶ್ಮೀರದ ಉಪಮುಖ್ಯಮಂತ್ರಿ ಸುರೀಂದರ್ ಚೌಧರಿ ಕೂಡ ಇದ್ದರು. ಘಟನೆಯ ವೇಳೆ ಉಂಟಾದ ಗಲಾಟೆಯಲ್ಲಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ವೈದ್ಯಕೀಯ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದುಬಂದಿದೆ.
ಘಟನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, “ದೇವರ ಕೃಪೆಯಿಂದ ನನ್ನ ತಂದೆ ಸುರಕ್ಷಿತವಾಗಿದ್ದಾರೆ. ದಾಳಿಯ ಹಿಂದಿನ ಉದ್ದೇಶ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ,” ಎಂದು ಹೇಳಿದ್ದಾರೆ.
ಪೊಲೀಸರು ಆರೋಪಿಯನ್ನು ವಿಚಾರಣೆ ನಡೆಸುತ್ತಿದ್ದು, ದಾಳಿ ಯತ್ನದ ಹಿನ್ನೆಲೆ ಹಾಗೂ ಕಾರಣಗಳ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.



