ಹೊಸದಿಗಂತ ಡಿಜಿಟಲ್ ಡೆಸ್ಕ್:
ತಂತ್ರಜ್ಞಾನದ ಲೋಪದೋಷಗಳನ್ನು ಬಳಸಿಕೊಂಡು ಸೈಬರ್ ಅಪರಾಧ ಎಸಗುವ ವಂಚಕರಿಗೆ ಕಾನೂನಿನ ಅಡಿಯಲ್ಲಿ ಕಠಿಣ ಶಿಕ್ಷೆ ಕೊಡುವಲ್ಲಿ ಕರ್ನಾಟಕ ರಾಜ್ಯ ಇಡೀ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿಧಾನ ಪರಿಷತ್ತಿನಲ್ಲಿಂದು ತಿಳಿಸಿದ್ದಾರೆ.
ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯರ ಪ್ರಶ್ನೆಗೆ ಉತ್ತರಿಸಿದ ಅವರು, ಸೈಬರ್ ಲೋಕದ ಅಪರಾಧಗಳನ್ನು ಪತ್ತೆ ಹಚ್ಚುವುದು ಮತ್ತು ಆರೋಪಿಗಳಿಗೆ ಶಿಕ್ಷೆ ಕೊಡಿಸುವುದು ಸವಾಲಿನ ಕೆಲಸವಾಗಿದ್ದರೂ, ಕರ್ನಾಟಕ ಈ ನಿಟ್ಟಿನಲ್ಲಿ ಮಹತ್ವದ ಸಾಧನೆ ಮಾಡಿದೆ ಎಂದರು.
ಕಳೆದ ಕೆಲವು ವರ್ಷಗಳ ಅಂಕಿ-ಅಂಶಗಳನ್ನು ಸದನದ ಮುಂದಿಟ್ಟ ಸಚಿವರು, 2020 ರಿಂದ 2024ರ ಅವಧಿಗೆ ಹೋಲಿಸಿದರೆ 2025ರಲ್ಲಿ ಸೈಬರ್ ಅಪರಾಧಗಳ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ. ಸರ್ಕಾರದ ಕಟ್ಟುನಿಟ್ಟಿನ ಕ್ರಮಗಳಿಂದಾಗಿ 2024ರಲ್ಲಿ ಒಟ್ಟು 14 ಸಾವಿರ ಸೈಬರ್ ಪ್ರಕರಣಗಳು ದಾಖಲಾಗಿವೆ ಎಂದು ತಿಳಿಸಿದರು. ಸೈಬರ್ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸಲು ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದ ಅವರು, ಸೈಬರ್ ಸೆಕ್ಯುರಿಟಿ ವಿಭಾಗಕ್ಕಾಗಿಯೇ ಪ್ರತ್ಯೇಕವಾಗಿ ಡಿಜಿಪಿ ನೇಮಕ ಮಾಡಲಾಗಿದೆ. ಅವರು ತಂತ್ರಜ್ಞಾನದ ಲೋಪದೋಷಗಳನ್ನು ಗುರುತಿಸಿ, ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಮಾಹಿತಿ ನೀಡಿದರು.



